ಸುರತ್ಕಲ್: ಗುರುಪುರ ವ್ಯಾಪ್ತಿಯಲ್ಲಿ 1 ಕೋಟಿ 40 ಲಕ್ಷ ರೂಪಾಯಿ ಅನುದಾನದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ಬುಧವಾರ ಗುದ್ದಲಿ ಪೂಜೆ ನೆರವೇರಿಸಿದರು.
ಗುರುಪುರ ಪಂಚಾಯತ್ ವ್ಯಾಪ್ತಿಯ ಗುರುಪುರ ಸರ್ಕಾರಿ ಪದವಿಪೂರ್ವ ಕಾಲೇಜು ಸಮೀಪದ ರಸ್ತೆ, ಗುರುಪುರ ಕೈಕಂಬ ಸಮೀಪದ ಕಂದಾವರ ಸಮೀಪ ನೂತನ ರಸ್ತೆಗೆ ಶಾಸಕರು ಗುದ್ದಲಿ ಪೂಜೆ ನೆರವೇರಿಸಿದರು.
ಅಲ್ಲಿಂದ ಅಡ್ಡೂರು ಮುಖ್ಯಪ್ರಾಣ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿ ದೇಗುಲದ ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಭರತ್ ಶೆಟ್ಟಿ ಅವರು, “ಗುರುಪುರ ವ್ಯಾಪ್ತಿಯಲ್ಲಿ ರಸ್ತೆಗಳ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದ್ದು, ಇದೀಗ ಒಂದು ಕೋಟಿ ನಲ್ವತ್ತು ಲಕ್ಷ ರೂಪಾಯಿ ವೆಚ್ಚದಲ್ಲಿ ಹಲವು ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ. ಇನ್ನುಳಿದ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಲಾಗುವುದು. ಇದಕ್ಕಾಗಿ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಅನುದಾನ ಒದಗಿಸುವ ಭರವಸೆ ನೀಡಿದ್ದಾರೆ. ಈಗಾಗಲೇ ಪೊಳಲಿಯಿಂದ ಕೈಕಂಬದವರೆಗೆ 5 ಕೋಟಿ ರೂ ವೆಚ್ಚದಲ್ಲಿ ಕಾಮಗಾರಿ ಆರಂಭಗೊಂಡಿದ್ದು ಸದ್ಯದಲ್ಲೇ ಲೋಕಾರ್ಪಣೆಗೊಳಿಸಲಾಗುವುದು. ಇನ್ನೂ ಕೂಡಾ ಗುರುಪುರ ಪಂಚಾಯತ್ ವ್ಯಾಪ್ತಿಯಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ಗುದ್ದಲಿ ಪೂಜೆ ನೆರವೇರಿಸಲಾಗುತ್ತದೆ. ತಡೆಗೋಡೆಯಂತಹ ಸಣ್ಣಪುಟ್ಟ ಕಾಮಗಾರಿ, ಸಣ್ಣ ಸಣ್ಣ ರಸ್ತೆಗಳನ್ನು ಅಭಿವೃದ್ಧಿ ಗೊಳಿಸಲಾಗುವುದು” ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಸೋಹನ್ ಅತಿಕಾರಿ, ಶಕ್ತಿ ಕೇಂದ್ರ ಪ್ರಮುಖ್ ಶ್ರೀಕರ್ ಶೆಟ್ಟಿ, ಪಂಚಾಯತ್ ಸದಸ್ಯರಾದ ಉದಯ್ ಭಟ್, ನಳಿನಿ ಶೆಟ್ಟಿ, ರಾಜೇಶ್ ಸುವರ್ಣ, ಸುನಿಲ್, ಬೂತ್ ಅಧ್ಯಕ್ಷ ರಾಜೇಶ್ ಶೆಟ್ಟಿ, ವಿನಯ್ ಸುವರ್ಣ, ಜಯರಾಮ್ ಪೂಜಾರಿ, ವಿನೋದ್ ಬರ್ಕೆ, ವಿಜಯ್ ಅಲಯಿಗುಡ್ಡೆ, ರೂಪೇಶ್ ಮತ್ತಿತರರು ಉಪಸ್ಥಿತರಿದ್ದರು.