ಸುರತ್ಕಲ್: ಆಸ್ತಿಯ ಪಹಣಿಯಲ್ಲಿ ವಾರಸುದಾರರುಗಳ ಹೆಸರುಗಳನ್ನು ಸೇರ್ಪಡೆ ಮಾಡುವ ಸಲುವಾಗಿ ಪಿರ್ಯಾದಿದಾರರು ಕಳೆದ ವರ್ಷ ಮುಲ್ಕಿ ತಾಲೂಕು ತಹಶೀಲ್ದಾರ ರವರ ಕಚೇರಿಗೆ ಅರ್ಜಿ ಸಲ್ಲಿಸಿದ್ದು, ಸದರಿ ಅರ್ಜಿಯು ಮುಲ್ಕಿ ಕಂದಾಯ ನಿರೀಕ್ಷಕರ ಕಚೇರಿಗೆ ವಿಚಾರಣೆಗಾಗಿ ಕಳುಹಿಸಿದ್ದು, ಮುಲ್ಕಿ ಕಂದಾಯ ನಿರೀಕ್ಷಕರಾದ ಜಿ.ಎಸ್ ದಿನೇಶ್ ರವರು ಒಂದು ವರ್ಷಕ್ಕಿಂತ ಹೆಚ್ಚು ಕಾಲ ಯಾವುದೇ ಕ್ರಮ ಕೈಗೊಳ್ಳದೇ ಬಾಕಿ ಇರಿಸಿಕೊಂಡಿದ್ದು ಡಿ.9ರಂದು ಅರ್ಜಿಯ ಬಗ್ಗೆ ಕಂದಾಯ ನಿರೀಕ್ಷಕರ ಕಛೇರಿಗೆ ಹೋಗಿ ವಿಚಾರಿಸಲಾಗಿ ಮುಲ್ಕಿ ಕಂದಾಯ ನಿರೀಕ್ಷಕ ಜಿ.ಎಸ್ ದಿನೇಶ್ ರವರು ಆಸ್ತಿಗೆ ಸಂಬಂಧಿಸಿದ ಪಹಣಿಯಲ್ಲಿ ವಾರಸುದಾರರುಗಳ ಹೆಸರುಗಳನ್ನು ಸೇರ್ಪಡೆ ಮಾಡಲು ರೂ 4 ಲಕ್ಷ ರೂಪಾಯಿ ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ. ಆದರೆ ಕಾನೂನು ಬದ್ಧವಾಗಿ ಮಾಡಬೇಕಾದ ಸರ್ಕಾರಿ ಕೆಲಸಕ್ಕೆ ಲಂಚ ನೀಡಿ ಕೆಲಸ ಮಾಡಿಸಿಕೊಳ್ಳಲು ಇಚ್ಛೆ ಇಲ್ಲದ ಕಾರಣ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿರುತ್ತಾರೆ.
ಡಿ.19ರ ಗುರುವಾರ ಬೆಳಿಗ್ಗೆ ಜಿ.ಎಸ್ ದಿನೇಶ್ ರವರು 4 ಲಕ್ಷ ರೂ. ಲಂಚದ ಹಣವನ್ನು ಸ್ವೀಕರಿಸುವಾಗ ಸುರತ್ಕಲ್ ಜಂಕ್ಷನ್ ಬಳಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುತ್ತಾರೆ. ಸದರಿ ಅಧಿಕಾರಿಯನ್ನು ವಶಕ್ಕೆ ಪಡೆದು ತನಿಖೆ ಕೈಗೊಳ್ಳಲಾಗಿರುತ್ತದೆ.
ಈ ಕಾರ್ಯಾಚರಣೆಯಲ್ಲಿ ಎಂ.ಎ ನಟರಾಜ, ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಮಂಗಳೂರು ವಿಭಾಗ, ಮಂಗಳೂರು ರವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಡಾ॥ ಗಾನ ಪಿ ಕುಮಾರ್, ಪೊಲೀಸ್ ನಿರೀಕ್ಷಕ ಅಮಾನುಲ್ಲಾ.ಎ, ಸುರೇಶ್ ಕುಮಾರ್ ಪಿ, ಚಂದ್ರಶೇಖರ್ ಕೆ.ಎನ್ ಇವರು ಸಿಬ್ಬಂದಿಗಳ ಜೊತೆ ಟ್ರಾಪ್ ಕಾರ್ಯಾಚರಣೆ ಕೈಗೊಂಡಿರುತ್ತಾರೆ.