ಜನವರಿ 18ರಿಂದ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟಾ ಸೀಸನ್-3

ಮಂಗಳೂರು: “ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಬಹು ನಿರೀಕ್ಷಿತ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ನ ಸೀಸನ್-3 ಇದೇ 2025ರ ಜನವರಿ 18 ರಿಂದ 22 ರ ವರೆಗೆ ಐದು ದಿನಗಳ ಕಾಲ ನಡೆಯಲಿದೆ. ಜನವರಿ 18ರ ಸಂಜೆ ಜಿಲ್ಲೆಯ ಹಲವು ಗಣ್ಯ ಅತಿಥಿಗಳಿಂದ
ಸೀಸನ್-3ಗೆ ಅಧಿಕೃತ ಚಾಲನೆ ದೊರೆಯಲಿದ್ದು ಕರಾವಳಿ ಉತ್ಸವ ಮೈದಾನದಿಂದ ನಾರಾಯಣ ಗುರು ವೃತ್ತ,
ಮಣ್ಣಗುಡ್ಡ ಗುರ್ಜಿ ವೃತ್ತ, ಕೆನರಾ ಉರ್ವ” ದವರೆಗೆ ಪ್ರತಿ ನಿತ್ಯ ಸಂಜೆ 4ರಿಂದ ರಾತ್ರಿ 10 ರವರೆಗೆ ಈ “ಆಹಾರೋತ್ಸವ” ನಡೆಯಲಿದೆ. ಈ ಹಿಂದೆ ಜನವರಿ 15ರಿಂದ 19ರವರೆಗೆ ನಿಗದಿಯಾಗಿದ್ದ ಸ್ಟ್ರೀಟ್ ಫುಡ್ ಫಿಯೆಸ್ಟಾದ ದಿನಾಂಕದಲ್ಲಿ ಅಲ್ಪ
ಬದಲಾವಣೆಯಾಗಿದ್ದು ಜನವರಿ 17ರ ಸಂಜೆ ಮಂಗಳೂರು ನಗರದಲ್ಲಿ ನಡೆಯುತ್ತಿರುವ ಕರಾವಳಿ ಉತ್ಸವಕ್ಕೆ
ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಆಗಮಿಸುತ್ತಿರುವ ಹಿನ್ನಲೆಯಲ್ಲಿ ಭದ್ರತೆ ಹಾಗೂ ಇನ್ನಿತರ ಕಾರಣಗಳಿಗೆ ಜಿಲ್ಲಾಡಳಿತದ ಮನವಿಯ ಮೇರೆಗೆ ಸ್ಟ್ರೀಟ್ ಫುಡ್ ಫಿಯೆಸ್ಟಾ ದಿನಾಂಕದಲ್ಲಿ ಬದಲಾವಣೆ
ಮಾಡಲು ಕಾರ್ಯಕ್ರಮದ ಆಯೋಜಕರು ತೀರ್ಮಾನಿಸಿದ್ದಾರೆ“ ಎಂದು ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಗಿರಿಧರ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.
ಸ್ಟ್ರೀಟ್ ಫುಡ್ ಫಿಯೆಸ್ಟಾಗೆ ಎಲ್ಲಾ ತಯಾರಿಗಳು ಭರದಿಂದ ಸಾಗಿದ್ದು ಈಗಾಗಲೇ ಆನ್ ಲೈನ್ ಮೂಲಕ ನೂರಕ್ಕೂ ಅಧಿಕ ಸಂಖ್ಯೆಯ ಆಹಾರ ಮಳಿಗೆಗಳು ನೋಂದಾಯಿಸಿಕೊಂಡಿದ್ದು, ಕೆಲವೇ ಕೆಲವು ಮಳಿಗೆಗಳು ಮಾತ್ರ ಬಾಕಿ
ಉಳಿದಿವೆ. ಆಸಕ್ತರು ಕೂಡಲೇ ಆನ್ ಲೈನ್ ಮೂಲಕವೇ ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ. ಕಳೆದ ಎರಡು ಆವೃತ್ತಿಗಳ ಮಂಗಳೂರಿನ ಸ್ಟ್ರೀಟ್ ಫುಡ್ ಫಿಯೆಸ್ಟಾ ಲಕ್ಷಾಂತರ ಜನರನ್ನು ಆಕರ್ಷಿಸಿ ಭಾರೀ ಜನಮನ್ನಣೆ ಪಡೆದು ಅತ್ಯಂತ ಯಶಸ್ವಿಯಾಗಿತ್ತು. ಅದರ ಮುಂದುವರಿದ ಭಾಗವಾಗಿ ಸೀಸನ್-3 ಗೆ ಕ್ಷಣಗಣನೆ
ಆರಂಭವಾಗಿದ್ದು ಸಾರ್ವಜನಿಕ ವಲಯದಲ್ಲಿ ಅತ್ಯುತ್ತಮ ಸ್ಪಂದನೆ ಹಾಗೂ ನಿರೀಕ್ಷೆ ಗರಿಗೆದರಿದೆ. ಈ ಹಿಂದಿನಂತೆಯೇ ಗ್ರಾಹಕರಿಗೆ ತುಳುನಾಡಿನ ಸಾಂಪ್ರದಾಯಿಕ ಆಹಾರ ಶೈಲಿ ಮಾತ್ರವಲ್ಲದೇ, ವಿಶಿಷ್ಟವಾದ
ಕರಾವಳಿ ಖಾದ್ಯ, ಉತ್ತರ ಕರ್ನಾಟಕ, ಗುಜರಾತಿ, ಆಂಧ್ರ, ಪಂಜಾಬಿ ಸೇರಿದಂತೆ ದಕ್ಷಿಣ ಭಾರತೀಯ, ಉತ್ತರ ಭಾರತೀಯ, ಸಸ್ಯಾಹಾರಿ, ಮಾಂಸಾಹಾರಿ, ಹೀಗೆ ಬಹು ಬೇಡಿಕೆಯ ವಿವಿಧ ಶೈಲಿಯ ಸಾಂಪ್ರದಾಯಿಕ ಆಹಾರ ಮಳಿಗೆಗಳು ಇರಲಿವೆ. ಅದರಲ್ಲೂ ಈ ಬಾರಿ ಸಾರ್ವಜನಿಕರ ಬೇಡಿಕೆಯ ಮೇರೆಗೆ ಸಸ್ಯಾಹಾರಿ ಮತ್ತು ಮಾಂಸಹಾರಿಗಳಿಗೆ ಪ್ರತ್ಯೇಕ ಕೌಂಟರ್ ಗಳ ವ್ಯವಸ್ಥೆಯನ್ನೂ ಮಾಡಲಾಗಿದೆ. ಇನ್ನುಳಿದಂತೆ ಈ ಹಿಂದೆ ಇದ್ದಂತಹ ಹತ್ತು ಹಲವು ಮನರಂಜನಾ ಕಾರ್ಯಕ್ರಮಗಳು ಈ ಬಾರಿಯೂ ಸಹ ಇರಲಿದ್ದು ಮಕ್ಕಳ ಆಟದ ಜೋನ್ ಗೆ ವಿಶೇಷ ಪ್ರಾಧಾನ್ಯತೆ ನೀಡಲಾಗಿದ್ದು, ಐದೂ ದಿನಗಳಲ್ಲಿ ಏಕಕಾಲಕ್ಕೆ ಹಲವು ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ. ಸೆಲ್ಫಿ ಕೌಂಟರ್, ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವ ಆಚರಿಸಲು ಅವಕಾಶ ಇರಲಿದೆ ಎಂದರು.
ವೇದಿಕೆಯಲ್ಲಿ ಅಶ್ವಿತ್ ಕೊಟ್ಟಾರಿ, ಜಗದೀಶ್ ಕದ್ರಿ, ಯತೀಶ್ ಬೈಕಂಪಾಡಿ, ಲಲಿತ್ ಮೆಂಡನ್, ದಿವಾಕರ್ ಪಾಂಡೇಶ್ವರ್ ಮತ್ತಿತರರು ಉಪಸ್ಥಿತರಿದ್ದರು.

error: Content is protected !!