ಕಲಬುರಗಿ: ಕಮಲಾಪುರ ತಾಲ್ಲೂಕಿನ ಮರಗುತ್ತಿ ಗ್ರಾಮ ಪಂಚಾಯಿತಿ ಸದಸ್ಯನೊಬ್ಬ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಮಹಿಳೆಯೊಬ್ಬರಿಗೆ ಗ್ರಾಮ ಪಂಚಾಯಿತಿಯಿಂದ ನೀಡಲಾಗುವ ಮನೆ ಬೇಕೆಂದರೆ ತನ್ನ ಜೊತೆ ಮಲಗಿಕೊಳ್ಳಬೇಕು ಎಂದು ಬೇಡಿಕೆ ಇಟ್ಟಿದ್ದಾನೆ ಎಂದು ಆರೋಪಿಸಲಾಗಿದೆ.
ಮರಗುತ್ತಿ ಗ್ರಾಮ ಪಂಚಾಯಿತಿ ಸದಸ್ಯ ನೀಲಕಂಠ ರಾಠೋಡ್ ಎಂಬಾತನ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಈತ ಮಳಸಾಪುರ ಗ್ರಾಮದ ಮಹಿಳೆಯೊಬ್ಬರಿಗೆ ಪದೇ ಪದೇ ಕರೆ ಮಾಡಿ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ದೂರಲಾಗಿದೆ.
ಮಳಸಾಪುರ ಗ್ರಾಮದಿಂದ ಮರಗುತ್ತಿ ಪಂಚಾಯಿತಿಗೆ ಆಯ್ಕೆಯಾಗಿರುವ ನೀಲಕಂಠ, ಆ ಮಹಿಳೆಗೆ ಪಂಚಾಯಿತಿ ಮನೆ ಮಾಡಿಸಿಕೊಡುವುದಾಗಿ ಆಮಿಷವೊಡ್ಡಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾನೆ. ಹಣ ನೀಡದಿದ್ದರೆ ತನ್ನ ಜೊತೆ ಮಲಗುವಂತೆ ಒತ್ತಾಯಿಸಿದ್ದಾನೆ.
ನೀನು ಬರದಿದ್ದರೆ ನಿನ್ನ ಮಗಳನ್ನು ಕಳುಹಿಸು ಎಂದು ಬೆದರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಪದೇ ಪದೇ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಮಹಿಳೆ ಕಮಲಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ನೀಲಕಂಠನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.