ಬೆಂಗಳೂರು: ರಾಜ್ಯದ ವಿವಿಧ ಭಾಗದಲ್ಲಿ ಇಂದು ಭಾರೀ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಇಂದು ಮಳೆಯಾಗಲಿದ್ದು ಉತ್ತರ ಕನ್ನಡದಲ್ಲಿ ಒಣಹವೆ ಮುಂದುವರಿಯಲಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ರಾಯಚೂರು, ಯಾದಗಿರಿ, ಕಲಬುರಗಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ದಕ್ಷಿಣ ಕರ್ನಾಟಕ ಹಾಗೂ ಮಲೆನಾಡಿನಲ್ಲೂ ಮಳೆ ಮುಂದುವರಿಯಲಿದೆ. ಕೊಡಗು, ಚಿಕ್ಕಮಗಳೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ, ತುಮಕೂರು ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಿಂಚು – ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಾಳೆ ಕೂಡಾ ಕರಾವಳಿಯ ಉಡುಪಿ & ಉತ್ತರ ಕನ್ನಡ ಭಾಗದಲ್ಲಿ ಮಳೆಯಾಗಲಿದೆ. ಉತ್ತರ ಕರ್ನಾಟಕದ ಕೊಪ್ಪಳ, ವಿಜಯಪುರ, ಕಲಬುರಗಿ ಹಾಗೂ ಗದಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ವಿವಿಧ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೀದರ್, ರಾಯಚೂರು, ಯಾದಗಿರಿ, ಹಾವೇರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಮೇ 1ರಿಂದ ಮೇ 4: ಕರ್ನಾಟಕದ ವಿವಿಧ ಭಾಗದಲ್ಲಿ ಮೇ 1ರಿಂದ ಮೇ 4ರ ವರೆಗೆ ಮಳೆ ಮುಂದುವರಿಯಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕ, ಕರಾವಳಿ ಹಾಗೂ ಉತ್ತರ ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗಲಿದೆ. ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.