ಮಂಗಳೂರು: ನಗರದ ಹೊರವಲಯದ ಕುಡುಪು ಬಳಿ ಕ್ಷುಲ್ಲಕ ಕಾರಣಕ್ಕೆ ಉತ್ತರ ಭಾರತ ಮೂಲದ ಯುವಕನನ್ನು ಕಲ್ಲಿನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅಂತ್ಯಂತ ಖಂಡನೀಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಚಿವರು, ಕ್ರಿಕೆಟ್ ಆಟ ಆಡುವ ವೇಳೆ ಆಟಗಾರರ ಗುಂಪು ಹಾಗೂ ಉತ್ತರ ಭಾರತದ ಅನ್ಯಕೋಮಿನ ಯುವಕನ ನಡುವೆ ಜಗಳ ನಡೆದಿದ್ದು ಯುವಕರು ಹಲ್ಲೆ ಮಾಡಿದ್ದಾರೆ. ಆತ ಗಂಭೀರ ಗಾಯಗೊಂಡು ಮೃತಪಟ್ಟಿದ್ದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾಗಿ ತಿಳಿಸಿದ್ದಾರೆ. ಪ್ರಕರಣ ಕುರಿತು ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಸೂಕ್ತ ತನಿಖೆ ನಡೆಸಲಾಗುತ್ತಿದೆ.