ಹಾನಗಲ್: ಗ್ಯಾಂಗ್ ರೇಪ್ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಗೊಂಡ ಆರೋಪಿಗಳು ರೋಡ್ ಶೋ ನಡೆಸಿದ್ದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಹಿನ್ನೆಲೆಯಲ್ಲಿ 7 ಮಂದಿ ಆರೋಪಿಗಳ ಪೈಕಿ ಐವರನ್ನು ಹಾನಗಲ್ ಪೊಲೀಸರು ಮತ್ತೆ ವಶಕ್ಕೆ ಪಡೆದಿದ್ದಾರೆ. ಇಬ್ಬರು ತಲೆಮರೆಸಿಕೊಂಡಿದ್ದಾರೆ.
ಮಹಿಳೆಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಆರೋಪಿಗಳು ಜಾಮೀನು ಪಡೆದು ಹಾವೇರಿಯಿಂದ ಅಕ್ಕಿ ಆಲೂರುವರೆಗೆ ಕಾರಿನಲ್ಲಿ ರೋಡ್ ಶೋ ನಡೆಸಿ ಸಂಭ್ರಮಾಚರಣೆ ನಡೆಸಿದ್ದರು. ಆರೋಪಿಗಳು ಜಾಮೀನು ನಿಯಮ ಉಲ್ಲಂಘಿಸಿದ್ದು, ಬಿಎನ್ಎಸ್ನ ವಿವಿಧ ಸೆಕ್ಷನ್ಗಳ ಅಡಿ ಪ್ರಕರಣ ದಾಖಲಿಸಿಕೊಂಡು ಐವರನ್ನು ಮತ್ತೆ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ಮಾಹಿತಿ ನೀಡಿದ್ದಾರೆ.
ಹಾವೇರಿ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಅಪ್ತಾಬ್ ಹಾಗೂ ಮದರ್ ಸಾಬ್ ಪತ್ತೆಗೆ ಶೋಧ ನಡೆಯತ್ತಿದೆ.