ಬೆಂಗಳೂರು: ಪಕ್ಷದಲ್ಲಿ ಇದ್ದೂ ಇಲ್ಲದಂತಿದ್ದ, ಶಾಸಕರಾದ ಶಿವರಾಮ್ ಹೆಬ್ಬಾರ್ ಹಾಗೂ ಎಸ್ಟಿ ಸೋಮಶೇಖರ್ ಅವರನ್ನು ಭಾರತೀಯ ಜನತಾ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಇವರಿಬ್ಬರನ್ನು ಬಸನಗೌಡ ಪಾಟೀಲ್ ಯತ್ನಾಳ್ ಮುಂಚೆಯೇ ಉಚ್ಛಾಟನೆ ಮಾಡಲಾಗುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಇವರಾಗಿಯೇ ಪಕ್ಷದಿಂದ ಹೊರಹೋಗುತ್ತಾರೆ ಎಂದು ಕಾಯುತ್ತಿದ್ದ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಕೊನೆಗೂ ಪಕ್ಷದಿಂದ ಆರು ವರ್ಷಗಳ ಕಾಲ ಆಚೆ ಕಳಿಸಿದೆ. ಶೀಘ್ರದಲ್ಲೇ ಇವರಿಬ್ಬರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರವನ್ನು ಶಿವರಾಮ್ ಹೆಬ್ಬಾರ್ ಪ್ರತಿನಿಧಿಸುತ್ತಿದ್ದಾರೆ. ಬೆಂಗಳೂರಿನ ಯಶವಂತಪುರ ಕ್ಷೇತ್ರದಿಂದ ಎಸ್.ಟಿ.ಸೋಮಶೇಖರ್ ಮೂರನೇ ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಈ ಮೊದಲು ಇಬ್ಬರೂ ಕಾಂಗ್ರೆಸ್ನಲ್ಲಿ ಗುರುತಿಸಿಕೊಂಡಿದ್ದರು. ಈ ಹಿಂದೆ ಇಬ್ಬರೂ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿವರಾಮ್ ಹೆಬ್ಬಾರ್ ಅವರು ಕಾರ್ಮಿಕ ಸಚಿವರಾದರೆ, ಸೋಮಶೇಖರ್ ಅವರು ಸಹಕಾರ ಸಚಿವರಾಗಿದ್ದರು.
2023ರಲ್ಲಿ ಇಬ್ಬರೂ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದು ಬಂದರು. ಆದರೆ, ಈಗ ಶಿವರಾಮ್ ಹೆಬ್ಬಾರ್ ಹಾಗೂ ಸೋಮಶೇಖರ್ ಕಾಂಗ್ರೆಸ್ ಪಕ್ಷದ ಜೊತೆ ಹೆಚ್ಚು ಗುರುತಿಸಿಕೊಳ್ಳುತ್ತಿದ್ದರು. ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಕ್ಕಾಗಿ ಇಬ್ಬರೂ ಉಚ್ಚಾಟನೆ ಮಾಡಿ ಹೈ ಕಮಾಂಡ್ ಆದೇಶ ಹೊರಡಿಸಿದೆ.