ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಸರಣಿ ಕೊಲೆಗಳ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಬೋಳಾರದ ಶಾದಿ ಮಹಲ್ ನಲ್ಲಿ ಮುಸ್ಲಿಂ ಮುಖಂಡರು ಹಾಗೂ ಕಾರ್ಯಕರ್ತರ ನಡೆದ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂಎಸ್ ಮುಹಮ್ಮದ್, ಅಲ್ಪಸಂಖ್ಯಾತ ಅಧ್ಯಕ್ಷ ಸ್ಥಾನಕ್ಕೆ ಶಾಹುಲ್ ಹಮೀದ್ ಸಹಿತ ಹತ್ತಾರು ಮುಖಂಡರು ಸಾಮೂಹಿಕ ರಾಜೀನಾಮೆ ಘೋಷಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದಿಂದ ಹಿಡಿದು ರಾಜ್ಯ ಘಟಕದವರೆಗಿನ ವಿವಿಧ ಹುದ್ದೆಗಳಲ್ಲಿರುವ ಮುಸ್ಲಿಂ ಮುಖಂಡರು ಹಾಗೂ ಕಾರ್ಯಕರ್ತರು ರಾಜೀನಾಮೆ ನಿರ್ಧಾರ ಪ್ರಕಟಿಸಿರುವ ಮೂಲಕ ಪಕ್ಷದ ನಾಯಕರಿಗೆ ಸೆಡ್ಡು ಹೊಡೆದಿದ್ದಾರೆ.
ಸಭೆಯಲ್ಲಿ ಕಾರ್ಯಕರ್ತರು ತಮ್ಮದೇ ನಾಯಕರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು ವೇದಿಕೆಗೆ ನುಗ್ಗಿ ನ್ಯಾಯಕ್ಕಾಗಿ ಆಗ್ರಹಿಸಿದ ಘಟನೆಯೂ ನಡೆಯಿತು. ಕಾರ್ಯಕರ್ತರನ್ನು ಸಮಾಧಾನ ಪಡಿಸಲು ಯತ್ನಿದರೂ ಮುಖಂಡರು ರಾಜೀನಾಮೆ ನೀಡದ ಹೊರತು ಸಭೆ ನಡೆಯಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು. ಕೊನೆಗೆ ನಾಯಕರು ತಮ್ಮ ರಾಜೀನಾಮೆ ನಿರ್ಧಾರವನ್ನು ಪ್ರಕಟಿಸಿದರು.