ಜಪ್ಪಿನಮೊಗರುವಿನಲ್ಲಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ
ಮಂಗಳೂರು, ಸೆ. 5: “ವಿದ್ಯಾರ್ಥಿಗಳು ದೇಶದ ಪರಂಪರೆ ಉಳಿಸಿಕೊಂಡು ಹೋಗುವಂತೆ ಮಾಡುವಲ್ಲಿ ಶಿಕ್ಷಕರ ಶ್ರಮ ಅತ್ಯವಶ್ಯ. ಮಕ್ಕಳನ್ನು ತಂದೆ-ತಾಯಂದಿರ ಮಾತ್ರವಲ್ಲ, ಸಮಾಜ ಮತ್ತು ದೇಶದ ಸಂಪತ್ತಾಗಿ ರೂಪಿಸಬೇಕಾಗಿದೆ” ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅಭಿಪ್ರಾಯಪಟ್ಟರು.
ಅವರು ಶುಕ್ರವಾರ ಜಪ್ಪಿನಮೊಗರು ಪ್ರೆಸ್ಟೀಜ್ ಶಾಲಾ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಶಾಲಾ ಶಿಕ್ಷಣ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ದಕ್ಷಿಣ ವಲಯ ಶಿಕ್ಷಕರ ದಿನಾಚರಣೆ ಸಮಿತಿ ಮತ್ತು ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿತ್ತು.
ಖಾದರ್ ಮುಂದುವರಿದು, “ಶಿಕ್ಷಕರ ಸಮಸ್ಯೆಗಳಿಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಶೀಘ್ರದಲ್ಲೇ ಸೂಕ್ತ ಪರಿಹಾರ ಒದಗಿಸಲಾಗುವುದು. ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಲು ಮತ್ತು ಬದುಕಲು ಭಾರತದಂತಹ ಉತ್ತಮ ದೇಶ ಇನ್ನೊಂದಿಲ್ಲ ಎನ್ನುವುದನ್ನು ಮಕ್ಕಳಿಗೆ ತಿಳಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ” ಎಂದರು.
ಶಿಕ್ಷಕರ ಹುದ್ದೆ ಖಾಲಿ – ಕಳವಳ ವ್ಯಕ್ತಪಡಿಸಿದ ಶಿಪ್ರಕಾಶ್
ದಿಕ್ಸೂಚಿ ಭಾಷಣ ಮಾಡಿದ ಮಂಗಳೂರು ಶಿಕ್ಷಣ ಶಿಕ್ಷಕರ ಮಹಾವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ. ಶಿವಪ್ರಕಾಶ್, “ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಎಲ್ಲವೂ ಸರಿಯೇನೂ ಇಲ್ಲ. ಕೇರಳದಲ್ಲಿ ಶಿಕ್ಷಕರು ನಿವೃತ್ತರಾದ ಮರುದಿನವೇ ಹೊಸ ಶಿಕ್ಷಕರ ನೇಮಕ ನಡೆಯುತ್ತದೆ. ಆದರೆ ಕರ್ನಾಟಕದಲ್ಲಿ 70 ಸಾವಿರಕ್ಕೂ ಅಧಿಕ ಶಿಕ್ಷಕರ ಹುದ್ದೆಗಳು ಖಾಲಿ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಮಸ್ಯೆಗಳು ಉಂಟಾಗಿವೆ, ಸರ್ಕಾರಗಳನ್ನು ದೂರಿದರೆ ಪ್ರಯೋಜನವಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರಶಸ್ತಿ – ಸನ್ಮಾನ
ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ರಾಧಾಕೃಷ್ಣ ರೈ ಹಾಗೂ ನಯನಾ ಕೆ. ಅವರನ್ನು ಸನ್ಮಾನಿಸಲಾಯಿತು. ಜೊತೆಗೆ 56 ಮಂದಿ ನಿವೃತ್ತ ಶಿಕ್ಷಕರಿಗೆ ಗೌರವ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಕುಮಾರ್ ಹೊಳ್ಳ ಅಧ್ಯಕ್ಷತೆ ವಹಿಸಿದರು.
ವಿಧಾನಸಭಾ ಸದಸ್ಯ ವೇದವ್ಯಾಸ ಕಾಮತ್, ಮೂಡ ಅಧ್ಯಕ್ಷ ಸದಾಶಿವ ಉಳ್ಳಾಲ್, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಪಂಚಗ್ಯಾರಂಟಿ ಯೋಜನಾ ಸಮಿತಿಯ ಅಧ್ಯಕ್ಷ ಸುರೇಂದ್ರ ಕಂಬಳಿ, ಅನುದಾನಿತ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೆಎಂಕೆ ಮಂಜನಾಡಿ, ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ರಫೀಕ್ ತುಂಬೆ, ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷೆ ಜಯವಂತಿ ಸೋನ್ಸ್, ಸಿಬಿಎಸ್ಸಿ ಶಾಲಾ ಉಸ್ತುವಾರಿ ನವಾಝ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ್ ಕಡ್ತಲ, ಕೆನರಾ ಬ್ಯಾಂಕ್ ವ್ಯವಸ್ಥಾಪಕಿ ಗೀತಾ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷೆ ಪ್ರಮೀಳಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ರಾಧಾಕೃಷ್ಣ ರಾವ್ ಮೊದಲಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್. ಈಶ್ವರ್ ಸ್ವಾಗತಿಸಿದರು. ಬಿಆರ್‌ಪಿ ತಹಸೀನ ಸನ್ಮಾನಪತ್ರ ವಾಚಿಸಿದರು. ಪ್ರಭಾರ ಸಮನ್ವಯಾಧಿಕಾರಿ ಸುಶ್ಮಾ ವಿ. ಕಿಣಿ ವಂದಿಸಿದರು. ಶಿಕ್ಷಕರಾದ ರಾಜೀವ ನಾಯಕ್ ಮತ್ತು ಜಯಶ್ರೀ ನಾಯಕ್ ನಿರೂಪಣೆ ನೆರವೇರಿಸಿದರು.