ಮಂಗಳೂರು: ʻರಾಜ್ಯದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಎಲೆಕ್ಟ್ರಾನಿಕ್ ವೋಟಿಂಗ್ ಯಂತ್ರ ಬದಲಿಗೆ ಬ್ಯಾಲೆಟ್ ಪೇಪರ್ ಬಳಸಲು ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರ ಸ್ವಾಗತಾರ್ಹ ಮತ್ತು ಶ್ಲಾಘನೀಯ. ದೇಶದಲ್ಲಿ ಅಕ್ರಮ ಮತದಾನ, ಮತಗಳ್ಳತನ, ಚುನಾವಣಾ ದೌರ್ಜನ್ಯದ ಘಟನೆಗಳು, ಚುನಾವಣಾ ಅಕ್ರಮಗಳ ಬಗ್ಗೆ ಸಾಕಷ್ಟು ದೂರುಗಳು ಕೇಳಿಬರುತ್ತಿವೆ. ಮತಗಳ್ಳತನದ ಸಾಕಷ್ಟು ಪುರಾವೆಗಳು ಕಣ್ಣ ಮುಂದಿವೆʼ ಎಂದು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಹಾಗೂ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಹಾಗೂ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಮತಗಳ್ಳತನ ಮತ್ತು ಚುನಾವಣಾ ಅಕ್ರಮಗಳ ಬಗ್ಗೆ ದೇಶವ್ಯಾಪಿ ಹೋರಾಟ ನಡೆಸುತ್ತಿದ್ದಾರೆ. ಚುನಾವಣೆಯ ಬಗ್ಗೆ ಮತದಾರರಿಗೆ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಮೂಡಿಸುವ ಗುರುತ್ತರ ಜವಾಬ್ದಾರಿ ಸರ್ಕಾರದ ಮೇಲಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಕೈಗೊಂಡಿರುವ ಈ ತೀರ್ಮಾನದಿಂದ ಮತಗಳ್ಳತನದ ಮೇಲಿನ ಗಂಭೀರ ಅನುಮಾನಗಳನ್ನು ಹೋಗಲಾಡಿಸಲು ಸಹಕಾರಿಯಾಗಲಿದೆ. ಕಾಗದದ ಬಳಕೆಯು ಹಳೆಯ ಕಾಲದ್ದೆಂದು ತೋರುತ್ತದೆಯಾದರೂ ಅದಕ್ಕಿಂತ ಹೆಚ್ಚಿನ ವಿಶ್ವಾಸಾರ್ಹತೆ, ಭದ್ರತೆ ಮತ್ತು ಪಾರದರ್ಶಕತೆಯನ್ನು ಬೇರೆ ಯಾವುದೂ ಒದಗಿಸುವುದಿಲ್ಲ. ಮುಂದುವರಿದ ರಾಷ್ಟ್ರಗಳು ಕೂಡ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಸುತ್ತಿರುವ ನಿದರ್ಶನ ನಮ್ಮ ಕಣ್ಣ ಮುಂದೆಯೇ ಇದೆ. ಗ್ಯಾರಂಟಿ, ಜಾತಿಗಣತಿಯಂತಹ ಕಾರ್ಯಕ್ರಮಗಳನ್ನು ಕರ್ನಾಟಕದಲ್ಲಿ ಅನುಷ್ಠಾನಗೊಳಿಸಲು ಹೊರಟಾಗ ಟೀಕಿಸಿದ್ದ ಬಿಜೆಪಿ ನಂತರದಲ್ಲಿ ಕಾಂಗ್ರೆಸ್ ಯೋಜನೆಗಳನ್ನೇ ನಕಲು ಮಾಡಿತು. ಕರ್ನಾಟಕದ ಮಾಡೆಲ್ ಈಗ ದೇಶದ ಮಾಡೆಲ್ ಆಗುತ್ತಿವೆ. ಹೀಗಾಗಿ ಬ್ಯಾಲೆಟ್ ಪೇಪರ್ ಬಳಕೆ ಕೂಡ ಮುಂದಿನ ದಿನಗಳಲ್ಲಿ ದೇಶದಾದ್ಯಂತ ಬಳಕೆಯಾಗುವುದರಲ್ಲಿ ಯಾವುದೇ ಸಂದೇಹವಿಲ್ಲ. ಒಟ್ಟಾರೆ ಬ್ಯಾಲೆಟ್ ಪೇಪರ್ ಬಳಕೆ ಗ್ರಾಮೀಣ ಭಾಗದ ಮತದಾರರಿಗೆ ಅನುಕೂಲ ಆಗುವುದರ ಜೊತೆಗೆ ಪಾರದರ್ಶಕತೆ ಕಾಯ್ದುಕೊಳ್ಳಲು ನೆರವಾಗುವುದರಿಂದ ರಾಜ್ಯ ಸರ್ಕಾರದ ಈ ತೀರ್ಮಾನ ನಿಜಕ್ಕೂ ಶ್ಲಾಘನೀಯʼ ಎಂದು ಭಂಡಾರಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.