ಬೆಂಗಳೂರು: 2025 ರ ಏಷ್ಯಾ ಕಪ್ ನಲ್ಲಿ ಟೀಮ್ ಇಂಡಿಯಾ ಸೆಪ್ಟೆಂಬರ್ 10 ರಂದು ಯುಎಇ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ, ನಂತರ ಸೆಪ್ಟೆಂಬರ್ 14 ರಂದು ಗುಂಪು ಹಂತದಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ.
ಉಭಯ ದೇಶಗಳ ನಡುವಿನ ಇತ್ತೀಚಿನ ಮಿಲಿಟರಿ ಉದ್ವಿಗ್ನತೆಯನ್ನು ಗಮನಿಸಿದರೆ, ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಭಾರತವು ಯಾವುದೇ ಪಂದ್ಯಾವಳಿಯಲ್ಲಿ ಪಾಕಿಸ್ತಾನದ ವಿರುದ್ಧ ಆಡಬಾರದು ಎಂದು ಹೇಳುತ್ತಿದ್ದಾರೆ. ಐಸಿಸಿ ಅಥವಾ ಇತರ ಬಹು-ರಾಷ್ಟ್ರೀಯ ಈವೆಂಟ್‌ಗಳಲ್ಲಿ ಭಾರತವು ಪಾಕಿಸ್ತಾನದೊಂದಿಗೆ ಪಂದ್ಯಗಳನ್ನು ಆಡಲು ನಿರಾಕರಿಸಬೇಕೆಂದು ಕೆಲವರು ಹೇಳುತ್ತಿದ್ದಾರೆ.
ಇತ್ತೀಚೆಗಷ್ಟೆ ವರ್ಲ್ಡ್ ಚಾಂಪಿಯನ್ಶಿಪ್ ಆಫ್ ಲೆಜೆಂಡ್ಸ್ ಟೂರ್ನಿಯಲ್ಲಿ ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯ ಬೇಕಿದ್ದ ಪಾಕಿಸ್ತಾನ್ ಚಾಂಪಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ಇರ್ಫಾನ್ ಪಠಾಣ್, ಹರ್ಭಜನ್ ಸಿಂಗ್, ಯೂಸುಫ್ ಪಠಾಣ್, ಸುರೇಶ್ ರೈನಾ ಹಾಗೂ ಶಿಖರ್ ಧವನ್ ತಿಳಿಸಿದ್ದರು.
ಇತ್ತ ಐವರು ಪ್ರಮುಖ ಆಟಗಾರರು ಪಂದ್ಯದಿಂದ ಹಿಂದೆ ಸರಿದ ಬೆನ್ನಲ್ಲೇ ಇತರೆ ಆಟಗಾರರು ಕೂಡ ಅಲಭ್ಯರಾಗುವ ಸೂಚನೆ ಲಭಿಸಿತ್ತು. ಇದರ ಬೆನ್ನಲ್ಲೇ ವರ್ಲ್ಡ್ ಚಾಂಪಿಯನ್ಶಿಪ್ ಆಫ್ ಲೆಜೆಂಡ್ಸ್ ಟೂರ್ನಿ ಆಯೋಜಕರು ಇಂಡಿಯಾ ಚಾಂಪಿಯನ್ಸ್ ಹಾಗೂ ಪಾಕಿಸ್ತಾನ್ ಚಾಂಪಿಯನ್ಸ್ ನಡುವಣ ಪಂದ್ಯವನ್ನು ರದ್ದುಗೊಳಿಸಿದರು.
ಸದ್ಯ ಏಷ್ಯಾ ಕಪ್ ವೇಳಾಪಟ್ಟಿ ಘೋಷಣೆಯಾದಾಗಿನಿಂದ, ಅನೇಕ ಜನರು ಭಾರತ ತಂಡ ಪಾಕಿಸ್ತಾನದೊಂದಿಗೆ ಆಡುವುದನ್ನು ಬೆಂಬಲಿಸುತ್ತಿಲ್ಲ. ಅನೇಕ ಜನರು ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಯಾನಗಳನ್ನು ನಡೆಸುತ್ತಿದ್ದಾರೆ.
ಈ ವಿವಾದದ ನಡುವೆ, ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಈಗ ಸ್ಪಷ್ಟೀಕರಣವನ್ನು ನೀಡಿದ್ದಾರೆ. ಮಂಡಳಿಯು ಸರ್ಕಾರ ಮಾಡಿದ ಮಾರ್ಗಸೂಚಿಗಳನ್ನು ಅನುಸರಿಸುತ್ತಿದೆ ಮತ್ತು ಟೀಮ್ ಇಂಡಿಯಾದ ಭಾಗವಹಿಸುವಿಕೆಯನ್ನು ಅದಕ್ಕೆ ಅನುಗುಣವಾಗಿ ನಿರ್ಧರಿಸಲಾಗುತ್ತದೆ ಎಂದು ಹೇಳಿದ್ದಾರೆ.