ಮಂಗಳೂರು: ಬೈಕ್‌ನಲ್ಲಿ ಸಾಗುತ್ತಿದ್ದ ವಿದ್ಯಾರ್ಥಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ನಗರದ ಬೊಂದೇಲ್ ಮೆಸ್ಕಾಂ ಕಚೇರಿ ಬಳಿ ನಡೆದಿದೆ. ಕಾರು ಚಾಲಕ ಕನ್ನಡಿ ಸವರಿಕೊಂಡು ಹೋದ ಪರಿಣಾಮ ವಿದ್ಯಾರ್ಥಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಬಳಿಕ ಮೃತ ಪಟ್ಟಿದ್ದಾನೆ ಎಂದು ಹೇಳಲಾಗಿದೆ.
ಬಜಪೆ ಜರಿನಗರ ನಿವಾಸಿ ಫಹದ್ ಅಹ್ಮದ್ (22) ಮೃತಪಟ್ಟ ಎಂಜಿನಿಯರಿಂಗ್ ವಿದ್ಯಾರ್ಥಿ.
ಚಾಲಕ ಕಾರು ಸಮೇತ ಸ್ಥಳದಿಂದ ಪರಾರಿಯಾಗಿದ್ದು, ತೊಕ್ಕೊಟ್ಟು ಬಳಿ ಆತನನ್ನು ಪತ್ತೆ ಹಚ್ಚಿ ವಶಕ್ಕೆ ಪಡೆಯಲಾಗಿದೆ. ಮೃತ ವಿದ್ಯಾರ್ಥಿ ಫಹದ್ ಅಹ್ಮದ್ ಕೊಣಾಜೆ ಬಳಿಯ ಖಾಸಗಿ ಎಂಜಿನಿಯರಿಂಗ್ ಕಾಲೇಜಿನ ಮೂರನೇ ವರ್ಷದ ಎಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಫಹದ್ ಬೆಳಗ್ಗೆ 8 ಗಂಟೆಯ ಸುಮಾರಿಗೆ ಬಜ್ಪೆಯಿಂದ ತನ್ನ ಬೈಕ್ ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ವೇಳೆ ಬೊಂದೇಲ್ ಬಳಿ ಹಿಂದಿನಿಂದ ಬರುತ್ತಿದ್ದ ಸ್ವಿಫ್ಟ್ ಕಾರೊಂದು ಬಂದಿದ್ದು, ಅದರ ಸೈಡ್ ಮಿರರ್ ಫಹದ್ ಅವರಿಗೆ ತಾಗಿದೆ. ಇದರಿಂದ ನಿಯಂತ್ರಣ ಕಳೆದುಕೊಂಡ ಅವರ ಬೈಕ್ ರಸ್ತೆ ಬದಿಯ ಫುಟ್‌ಪಾತ್‌ನಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಅವರನ್ನು ಅಸ್ಪತ್ರೆಗೆ ಕರೆದೊಯ್ದರೂ, ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯಿತ್ತಲೇ ಸ್ಥಳಕ್ಕೆ ಬಂದ ಮಂಗಳೂರು ಉತ್ತರ ಸಂಚಾರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರತ್ಯಕ್ಷದರ್ಶಿಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿ ಪರಾರಿಯಾಗಿದ್ದ ಕಾರನ್ನು ತೊಕ್ಕೊಟ್ಟುವಿನಲ್ಲಿ ಪತ್ತೆಹಚ್ಚಿ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.