ತಿಮರೋಡಿ ಗಡಿಪಾರು ವಿರೋಧಿಸಿ ಪ್ರತಿಭಟನೆಗೆ ಬೆಳ್ತಂಗಡಿ ತಹಶೀಲ್ದಾರ್ ತಡೆ

ಬೆಳ್ತಂಗಡಿ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಆದೇಶದ ವಿರುದ್ಧ ಪ್ರತಿಭಟನೆ ನಡೆಸಲು ಕೋರಿದ ಅನುಮತಿಯನ್ನು ಬೆಳ್ತಂಗಡಿ ತಹಶೀಲ್ದಾರ್ ನಿರಾಕರಿಸಿದ್ದಾರೆ.

ಸೆ.18 ರಂದು ಬೆಳ್ತಂಗಡಿ ತಾಲೂಕಿನ ಉಜಿರೆಯ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷ ಗಡಿಪಾರು ಮಾಡಿ ಎಂದು ಪುತ್ತೂರು ಸಹಾಯಕ ಆಯುಕ್ತ (ಎಸಿ) ಸ್ಟೆಲ್ಲಾ ವರ್ಗಿಸ್ ಆದೇಶ ಹೊರಡಿಸಿದ್ದರು. ಈ ಗಡಿಪಾರು ಆದೇಶದ ವಿರುದ್ಧ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ಅಧ್ಯಕ್ಷ ಅನಿಲ್ ಕುಮಾರ್ ಅಂತರ ಅವರು ಸೆ.29 ರಂದು ಬೆಳ್ತಂಗಡಿ ಆಡಳಿತ ಸೌಧದ ಮುಂದೆ ಪ್ರತಿಭಟನೆ ನಡೆಸಲು ಅನುಮತಿ ಕೋರಿ ಸೆ.25 ಬೆಳ್ತಂಗಡಿ ತಹಶೀಲ್ದಾರ್ ಗೆ ಅರ್ಜಿ ಸಲ್ಲಿಸಿದ್ದರು.

ಪ್ರತಿಭಟನೆಗೆ ಅನುಮತಿ ಕೋರಿ ಸಲ್ಲಿಸಲಾದ ಈ ಅರ್ಜಿ ಪರಿಶೀಲನೆ ಮಾಡಿದ ಬೆಳ್ತಂಗಡಿ ಪೊಲೀಸರು, ಸಾರ್ವಜನಿಕ ಶಾಂತಿಗೆ ಭಂಗವನ್ನುಂಟು ಮಾಡಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಅನುಮತಿ ನೀಡದಂತೆ ಪೊಲೀಸರು ಅಭಿಪ್ರಾಯ ವ್ಯಕ್ತಪಡಿಸಿದ ಮೇರೆಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅವರು ಸೆ.26 ರಂದು ಪ್ರತಿಭಟನೆಗೆ ಅನುಮತಿ ನಿರಾಕರಿಸಿ ಹಿಂಬರಹ ನೀಡಿದ್ದಾರೆ.

error: Content is protected !!