ಮಂಗಳೂರು: ರಾಜ್ಯದ ಯಾವುದೇ ಸಂಸ್ಥೆ ಅಥವಾ ಕಂಪೆನಿಯು ಕಾರ್ಮಿಕರಿಗೆ ಕನಿಷ್ಠ ವೇತನ ನೀಡದಿದ್ದರೆ ಅವರ ವಿರುದ್ಧ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಕಾರ್ಮಿಕ ಇಲಾಖೆಯ ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್ ಎಚ್ಚರಿಕೆ ನೀಡಿದ್ದಾರೆ.
ಮಂಗಳವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ರಾಜ್ಯ ಸರ್ಕಾರ ಐಎಎಸ್ ಅಧಿಕಾರಿಯನ್ನು ನೇಮಿಸುವ ಬದಲು ಕಾರ್ಮಿಕರ ಹಿತಾಸಕ್ತಿಯನ್ನು ಪ್ರತಿನಿಧಿಸುವ ನನ್ನಂತಹ ವ್ಯಕ್ತಿಯನ್ನು ಈ ಹುದ್ದೆಗೆ ನೇಮಿಸಿದೆ. ಮಂಡಳಿಯಲ್ಲಿ ವಿವಿಧ ವರ್ಗಗಳ 9 ಮಂದಿ ಸದಸ್ಯರಿದ್ದಾರೆ. ಎಲ್ಲಾ ವರ್ಗದ ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿಪಡಿಸುವ ಸಂಬಂಧ ಮಂಡಳಿ ಕಾಲಕಾಲಕ್ಕೆ ಸರ್ಕಾರಕ್ಕೆ ವರದಿ ಸಲ್ಲಿಸುವ ಜವಾಬ್ದಾರಿ ಹೊಂದಿದೆ” ಎಂದು ಹೇಳಿದರು.
“ಈಗಾಗಲೇ ಸೆಪ್ಟೆಂಬರ್‌ನಲ್ಲಿ ವರದಿ ಸಲ್ಲಿಸಲಾಗಿದೆ. ಅದನ್ನು ಅಂಗೀಕರಿಸುವ ಅಥವಾ ತಿರಸ್ಕರಿಸುವ ಅಧಿಕಾರ ಸರ್ಕಾರಕ್ಕಿದೆ. ವರದಿ ತಿರಸ್ಕೃತವಾದರೆ, ಮತ್ತೆ ಕಾರ್ಮಿಕರ ಪರವಾಗಿ ಕನಿಷ್ಠ ವೇತನದ ಕುರಿತು ಸಲಹಾ ವರದಿ ಸಲ್ಲಿಸಲಾಗುತ್ತದೆ” ಎಂದು ಅವರು ಹೇಳಿದರು.
ಪ್ರಸ್ತುತ ರಾಜ್ಯದ 81 ವಿಭಿನ್ನ ವರ್ಗಗಳಲ್ಲಿ ಸುಮಾರು 2 ಕೋಟಿ ಕಾರ್ಮಿಕರಿದ್ದಾರೆ. ಇವರಿಗೆ ರೂ.14,000 ರಿಂದ ರೂ.19,000ರವರೆಗೆ ಕನಿಷ್ಠ ವೇತನ ನಿಗದಿಯಾಗಿದೆ. ಗ್ರಾಹಕ ಬೆಲೆ ಸೂಚ್ಯಂಕದ ಆಧಾರದ ಮೇಲೆ ವೇತನವನ್ನು ಕಾಲಕಾಲಕ್ಕೆ ಪರಿಷ್ಕರಿಸಲು ಮಂಡಳಿ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ಅವರು ಹೇಳಿದರು.
ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕಾರ್ಮಿಕರ ಪರವಾಗಿ ಕಾರ್ಯನಿರ್ವಹಿಸುತ್ತಿದ್ದು, ಕಾರ್ಮಿಕರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದ್ದಾರೆ ಎಂದು ಶಹೀದ್ ಹೇಳಿದರು.
ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, “ದಕ್ಷಿಣ ಕನ್ನಡ ಜಿಲ್ಲೆಯ ಬೀಡಿ ಕಾರ್ಮಿಕರಿಗೆ ಕನಿಷ್ಠ ವೇತನ ಒದಗಿಸುವ ಪ್ರಯತ್ನ ನಡೆಯುತ್ತಿದೆ. ಹೊರಗುತ್ತಿಗೆ ಕಾರ್ಮಿಕರಿಗೆ ವೇತನದ ವಿಷಯದಲ್ಲಿ ಅನ್ಯಾಯವಾಗಿದ್ದರೆ ಅದರ ಪರಿಶೀಲನೆ ಮಾಡಲಾಗುವುದು” ಎಂದರು.
ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಅಕ್ಟೋಬರ್ 10ರಂದು ಮಂಗಳೂರಿನಲ್ಲಿ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ರಾಜ್ಯ ಗಣಿಗಾರಿಕೆ ಅಭಿವೃದ್ಧಿ ನಿಗಮ ಅಧ್ಯಕ್ಷ ವಿಶ್ವಾಸ್‌ಕುಮಾರ್ ದಾಸ್, ಸುಳ್ಯ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮುಸ್ತಾಫಾ, ಹಾಗೂ ಮುಖಂಡರಾದ ಶುಭೋದಯ ಆಳ್ವ, ಜಯಶೀಲ ಅಡ್ಯಂತಾಯ, ನಿತ್ಯಾನಂದ ಶೆಟ್ಟಿ, ಲಾರೆನ್ಸ್ ಡಿʼಸೋಜ ಉಪಸ್ಥಿತರಿದ್ದರು.