ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ಸೋಮವಾರ(ನ. 04) ರಾತ್ರಿ ಕಾರು ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಆರು ಜನ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ದೇವ ಪೊಲೀಸ್ ಠಾಣೆ ವ್ಯಾಪ್ತಿಯ ಕುಟ್ಲಪುರ ಗ್ರಾಮದ ಕಲ್ಯಾಣಿ ನದಿ ಸೇತುವೆ ಮೇಲೆ ರಾತ್ರಿ 10 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ನಂಬರ್ ಪ್ಲೇಟ್ ಇಲ್ಲದ ಹೊಸ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಎಲ್ಲಾ ಪ್ರಯಾಣಿಕರು ಮೃತಪಟ್ಟಿದ್ದಾರೆ. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರನ್ನು ಫತೇಪುರ ಪಟ್ಟಣದ ನಿವಾಸಿಗಳು ಎಂದು ಗುರುತಿಸಲಾಗಿದೆ.

ಅತಿವೇಗದಿಂದ ಬಂದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಮುಂದೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಸದ್ಯ ಪೊಲೀಸರು ಟ್ರಕ್ ಅನ್ನು ವಶಪಡಿಸಿಕೊಂಡಿದ್ದು, ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಬಾರಾಬಂಕಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಶಶಾಂಕ್ ತ್ರಿಪಾಠಿ ಮತ್ತು ಎಸ್ಪಿ ಅರ್ಪಿತ್ ವಿಜಯವರ್ಗಿಯಾ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಈ ಕುರಿತು ಮಾತನಾಡಿರುವ ಶಶಾಂಕ್ ತ್ರಿಪಾಠಿ, ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಕಾರು ಟ್ರಕ್‌ನ ಲೇನ್‌ಗೆ ಪ್ರವೇಶಿಸಿದ್ದು, ಇದು ಅಪಘಾತಕ್ಕೆ ಕಾರಣವಾಗಿದೆ. ಕಾರಿನಲ್ಲಿ ಎಂಟು ಪ್ರಯಾಣಿಕರಿದ್ದು, ಐವರು ಪುರುಷರು, ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ.