ಇಂದೋರ್: ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಮೃತಪಟ್ಟಿದ್ದು, 38 ಮಂದಿಗೆ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಇಂದೋರ್ ಮತ್ತು ಮ್ಹೋವ್ ನಡುವಿನ ಸಿಮ್ರೋಲ್ ಭೇರು ಘಾಟ್‌ನಲ್ಲಿ ಸೋಮವಾರ(ನ.04) ತಡರಾತ್ರಿ ಸಂಭವಿಸಿದೆ.

ಪೊಲೀಸರ ಮಾಹಿತಿ ಪ್ರಕಾರ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಇತರ ಒಂಬತ್ತು ಮಂದಿಯನ್ನು ಇಂದೋರ್‌ನ ಎಂವೈ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.

ಓಂಕಾರೇಶ್ವರದಿಂದ ಇಂದೋರ್‌ಗೆ ತೆರಳುತ್ತಿದ್ದಾಗ ಬಸ್ ಅಪಘಾತಕ್ಕೀಡಾಗಿದೆ ಎಂದು ಜಿಲ್ಲಾಧಿಕಾರಿ ಶಿವಂ ವರ್ಮಾ ತಿಳಿಸಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು “ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ ಮತ್ತು ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡಲು ಸೂಚನೆಗಳನ್ನು ನೀಡಲಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥನೆ” ಎಂದು ಹೇಳಿದ್ದಾರೆ.