ಮಂಗಳೂರು: ಮಂಗಳೂರು ನಗರದ ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಎಂಡಿಎಂಎಯನ್ನು ಖರೀದಿಸಿ ಮಾದಕವಸ್ತು ಸರಬರಾಜು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ನ.4ರಂದು ಮಂಗಳೂರು ನಗರದ ಬಂದರು ಮತ್ತು ದಕ್ಕೆಯ ಪರಿಸರದಲ್ಲಿ ಆಟರಿಕ್ಷಾದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಸಿಸಿಬಿ ಪೊಲೀಸರು ಆಟೋ ಚಾಲಕ ಅಬ್ದುಲ್ ಸಲಾಮ್ (39) ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನಿಂದ 1.20ಸಾ. ರೂ. ಮೌಲ್ಯದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಸಹಿತ ಒಟ್ಟು 2.30ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ಈ ಕುರಿತು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ನ.6ರಂದು ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಬೋಳಿಯಾರು ಪರಿಸರದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಸಿಸಿಬಿ ಪೊಲೀಸರು, ಮುಹಮ್ಮದ್ ನಾಸೀರ್ ಯಾನೆ ಶಾಕೀರ್ ಯಾನೆ ಚಾಕಿ(28) ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನ ವಶದಿಂದ ರೂ. 1.20ಲಕ್ಷ ರೂ. ಮೌಲ್ಯದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಸಹಿತ ಒಟ್ಟು 2.05ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.