ಬಂಟ್ವಾಳ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು (ನ.15) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ KA 02 AE 6146 ನೊಂದಣಿ ಸಂಖ್ಯೆಯ ಇನ್ನೋವಾ ಕಾರು, ಬಂಟ್ವಾಳ ಬಿ.ಸಿ. ರೋಡ್ ನಾರಾಯಣ ಗುರು ವೃತ್ತದ ಬಳಿ ಚಾಲಕನ ನಿಯಂತ್ರಣ ತಪ್ಪಿ ವೃತ್ತಕ್ಕೆ ಢಿಕ್ಕಿ ಹೊಡೆದ ಪರಿಣಾಮ ಈ ದಾರುಣ ಘಟನೆ ಸಂಭವಿಸಿದೆ.
ರವಿ (64), ನಂಜಮ್ಮ (75), ರಮ್ಯಾ (23) ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ ಸುಶೀಲ, ಕೀರ್ತಿ ಕುಮಾರ್, ಕಿರಣ್, ಬಿಂದು, ಪ್ರಶಾಂತ್ ಹಾಗೂ ಚಾಲಕ ಸುಬ್ರಹ್ಮಣ್ಯ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರೂ ಪರಸ್ಪರ ಸಂಬಂಧಿಕರೆಂದು ತಿಳಿದುಬಂದಿದೆ.
ಈ ಸಂಬಂಧ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ.151/25, ಕಲಂ 281, 125A, 106 BNS ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.