ಮಂಗಳೂರಿನಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ
ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ಮಂಗಳೂರು. ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು, ಸೌಹಾರ್ದ ಸಹಕಾರ ಸಂಘಗಳು ಹಾಗೂ ಎಲ್ಲಾ ವಿಧದ ಸಹಕಾರ ಸಂಘಗಳು ಮತ್ತು ಸಹಕಾರ ಇಲಾಖೆಯ ಸಹಯೋಗದೊಂದಿಗೆ 72ನೇ ಅಖಿಲ ಭಾರತ ಸಹಕಾರ ಸಪ್ತಾಹವು ಆದಿತ್ಯವಾರ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಜರುಗಿತು.
ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಬಳಿಕ ಮಾತಾಡಿದ ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು, “ಸಹಕಾರ ವ್ಯವಸ್ಥೆಯ ಮೂಲಕ ಜನಸಾಮಾನ್ಯರ ಬದುಕಿನಲ್ಲಿ ಬದಲಾವಣೆ ತರುವ ಪ್ರಯತ್ನ ಸಹಕಾರ ಸಪ್ತಾಹ ಆಚರಣೆಯ ಮೂಲಕ ನಡೆಯುತ್ತಿದೆ. ಎಸ್ ಸಿಡಿಸಿಸಿ ಬ್ಯಾಂಕ್ ಜನಸಾಮಾನ್ಯರು ಅದರಲ್ಲೂ ಮಹಿಳಾ ಸ್ವಾವಲಂಬಿಗಳ ಬಾಳಿನಲ್ಲಿ ಮಹತ್ವದ ಪಾತ್ರ ವಹಿಸಿದೆ. ಇಂದು ಖಾಸಗಿ ಬ್ಯಾಂಕ್ ಗಳು ಒಂದಕ್ಕೊಂದು ವಿಲೀನಗೊಂಡಿದ್ದು ಭಾಷೆ ಬಾರದ ಹೊರಗಿನವರನ್ನು ಬ್ಯಾಂಕ್ ಗಳಲ್ಲಿ ನೇಮಕ ಮಾಡಲಾಗಿದೆ. ಆದರೆ ಎಸ್ ಸಿಡಿಸಿಸಿ ಬ್ಯಾಂಕ್ ಮಾತ್ರ ಜನಪರವಾಗಿ ಕಾರ್ಯ ನಿರ್ವಹಿಸುತ್ತ ಇತರ ಬ್ಯಾಂಕ್ ಗಳಿಗೆ ಮಾದರಿಯಾಗಿದೆ. ಸಹಕಾರ ಸಪ್ತಾಹ ದೊಡ್ಡಮಟ್ಟದಲ್ಲಿ ಯಶಸ್ವಿಯಾಗಲು ಇಲ್ಲಿ ಸಾವಿರಾರು ಸಂಖ್ಯೆಯಲ್ಲಿ ನೆರೆದಿರುವ ಜನರೇ ಕಾರಣ“ ಎಂದರು.

ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಮಾತಾಡಿ, “ಗ್ರಾಮೀಣ ಜನರು ಸ್ವಾವಲಂಬಿಗಳಾಗಿ ಬದುಕಲು ಸಹಕಾರಿ ಕ್ಷೇತ್ರ ಕಾರಣ ದೇಶದ ಆತ್ಮ ಇರುವುದು ಗ್ರಾಮಗಳಲ್ಲಿ. ಮಹಾತ್ಮಾ ಗಾಂಧೀಜಿ ಅವರು ಇದನ್ನೇ ಹೇಳಿದ್ದರು. ಹಳ್ಳಿಗಳ ಕಟ್ಟಕಡೆಯ ಜನರಿಗೆ ಸ್ವಾತಂತ್ರ್ಯ ಸಿಕ್ಕಿದಾಗ ದೇಶ ಅಭಿವೃದ್ಧಿಯಾಗುತ್ತದೆ. ಎಸ್ ಸಿಡಿಸಿಸಿ ಬ್ಯಾಂಕ್ ನಿಂದ ಕರಾವಳಿಯ ಮಹಿಳೆಯರು, ಹೆಣ್ಣುಮಕ್ಕಳ ಸ್ವಾಭಿಮಾನದ ಜೀವನ ಸಾಗಿಸುತ್ತಿದ್ದಾರೆ. ಇದು ದೇಶಕ್ಕೆ ಮಾದರಿಯಾಗಿದೆ. ಮಹಿಳೆಯರು ಹುಟ್ಟುವಾಗಲೇ ನಾಯಕತ್ವದ ಗುಣವನ್ನು ಹೊಂದಿರುತ್ತಾರೆ. ಮನೆಯನ್ನು ನಿರ್ವಹಣೆ ಮಾಡುವಲ್ಲಿಂದ ಇಡೀ ಸಮಾಜವನ್ನು ಸ್ವಸ್ಥವಾಗಿ ಇರಿಸುವವರೆಗೆ ಮಹಿಳೆಯರ ಪಾತ್ರ ಪ್ರಮುಖದ್ದಾಗಿದೆ. ಮಹಿಳೆಯರಿಗೆ ಶಕ್ತಿ ತುಂಬುವ ರಾಜೇಂದ್ರ ಕುಮಾರ್ ಅವರ ಕೈಗಳನ್ನು ಬಲಪಡಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ“ ಎಂದರು.

ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಮಾತಾಡಿ, ”ಸಹಕಾರ ಸಂಘಗಳು ಪ್ರೀತಿಯಿಂದ ವ್ಯವಹಾರ ನಡೆಸುತ್ತವೆ. ವಾಣಿಜ್ಯ ಬ್ಯಾಂಕ್ ಗಳು ಸಾಲ ಕೊಡದೆ ಇದ್ದಾಗ ವಾಣಿಜ್ಯ, ಕೃಷಿ, ಶಿಕ್ಷಣ, ವಸತಿ ಗೆ ನೆರವಾಗಿದ್ದು ಇದೇ ಸಹಕಾರಿ ಬ್ಯಾಂಕ್ ಗಳು. ದೇಶದಲ್ಲಿರುವ ಹೆಚ್ಚಿನ ಸಕ್ಕರೆ ಕಾರ್ಖಾನೆಗಳಿಗೆ ಸಾಲ ನೀಡಿರುವುದು ಇದೇ ಬ್ಯಾಂಕ್ ಗಳು. ಇವತ್ತು ಸಿದ್ದರಾಮಯ್ಯ ಸರಕಾರ ರೈತಾಪಿ ವರ್ಗದ ಜೊತೆಗಿದೆ. ಸಹಕಾರ ಸಂಘಗಳ ಜೊತೆಗೆ ನಮ್ಮ ಸರಕಾರ ಬೆನ್ನಿಗೆ ಬೆನ್ನು ಕೊಟ್ಟು ನಿಂತಿದೆ“ ಎಂದರು.

ವೇದಿಕೆಯಲ್ಲಿ ಕರ್ನಾಟಕ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ.ದೇವೇಗೌಡ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ, ನಬಾರ್ಡ್ ಚೇರ್ ಮೆನ್ ಡಾ.ಸುರೇಂದ್ರ ಬಾಬು, ಶಶಿಕುಮಾರ್ ರೈ ಬಾಲ್ಯೊಟ್ಟು, ಬಿ.ಜಯಕರ ಶೆಟ್ಟಿ ಇಂದ್ರಾಳಿ, ನವೀನ್, ಐಕಳ ಭಾವ ದೇವಿಪ್ರಸಾದ್ ಶೆಟ್ಟಿ, ಹೆಚ್.ಎಂ.ಕುಮಾರ್, ರವಿರಾಜ್ ಹೆಗ್ಡೆ, ಪೂರ್ಣಿಮಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಸಹಕಾರ ಮಾಣಿಕ್ಯ ಪ್ರಶಸ್ತಿ :
ಇದೇ ಸಂದರ್ಭದಲ್ಲಿ ಮೂರು ಸಹಕಾರ ಸಂಸ್ಥೆಗಳಿಗೆ “ಸಹಕಾರ ಮಾಣಿಕ್ಯ ಪ್ರಶಸ್ತಿ”ಯನ್ನುನೀಡಲಾಯಿತು. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಲಾ 1 ಉತ್ತಮ ಕೃಷಿಪತ್ತಿನ ಸಹಕಾರಿ ಸಂಘಗಳನ್ನು ಹಾಗೂ 1 ಪತ್ತಿನ ಸಹಕಾರಿ ಸಂಘವನ್ನು 2025ನೇ ಸಾಲಿನ “ಸಹಕಾರ ಮಾಣಿಕ್ಯ” ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯ ಜೊತೆಗೆ 5 ಗ್ರಾಂ ಚಿನ್ನದ ಪದಕ. 10.000 ರೂ. ನಗದು ಹಾಗೂ ಪಾರಿತೋಷಕವನ್ನು ನೀಡಲಾಯಿತು.. ಸಾಮಾನ್ಯ ವಿಭಾಗದಲ್ಲಿ ಕೃಷಿ ಪತ್ತಿನ ಸಹಕಾರ ಸಂಘಗಳ ಪೈಕಿ ಉಭಯ ಜಿಲ್ಲೆಗಳಲ್ಲಿ ಒಂದರಂತೆ ಹಾಗೂ ಹೈನುಗಾರಿಕೆ ಕ್ರೆಡಿಟ್ಸೊಸೈಟಿ, ಮೀನುಗಾರಿಕಾ ಸಹಕಾರಿ ಸಂಘ, ಸೌಹಾರ್ಧ ಸಹಕಾರಿ ಸಂಘ ಹಾಗೂ ಮಹಿಳಾ ಸಹಕಾರಿ ಸಂಘಕ್ಕೆ ಉಭಯ ಜಿಲ್ಲೆಗಳಿಂದ 1 ಹಾಗೂ ವಜ್ರ ಮಹೋತ್ಸವ ಮತ್ತು ಸುವರ್ಣ ಮಹೋತ್ಸವ ಪೂರೈಸಿದ ಸಂಘಗಳನ್ನು ಗೌರವಿಸಲಾಯಿತು.
ಸ್ವ ಸಹಾಯ ಸಂಘಗಳು ಸೇರಿದಂತೆ ವಿವಿಧ ಸಂಸ್ಥೆ ಗಳ ವಸ್ತು ಪ್ರದರ್ಶನ ಮಳಿಗೆಗಳನ್ನು ತೆರೆಯಲಾಗಿತ್ತು. ‘ಸಹಕಾರ ‘ಸ್ಮರಣ ಸಂಚಿಕೆಯನ್ನು ಈ ಸಂದರ್ಭದಲ್ಲಿ ಬಿಡುಗಡೆ ಗೊಳಿಸಲಾಯಿತು. ಎಸ್ ಸಿ ಡಿ ಸಿ ಸಿ ಬ್ಯಾಂಕ್ ವತಿಯಿಂದ ರಾಜ್ಯ ಸಹಕಾರ ಮಹಾಮಂಡಳ ಶಿಕ್ಷಣ ನಿಧಿಗೆ 1.62 ಕೋಟಿ ರೂಪಾಯಿಗಳನ್ನು ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳದ ಅಧ್ಯಕ್ಷ ಜಿ.ಟಿ. ದೇವೇಗೌಡರ ಮೂಲಕ ಎಸ್ ಸಿ ಡಿ ಸಿ ಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹಸ್ತಾಂತರಿಸಿದರು.



ಆಕರ್ಷಕ ಮೆರವಣಿಗೆ:
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಆವರಣದಿಂದ ಕರುನಾಡಿನ ವೈವಿಧ್ಯತೆಯನ್ನೊಳಗೊಂಡ ಸಹಕಾರ ಮೆರವಣಿಗೆ ಜನಮನ ಸೆಳೆಯಿತು. ಸುಮಾರು 50ಕ್ಕೂ ಹೆಚ್ಚಿನ ಟ್ಯಾಬ್ಲೊಗಳು, ಸಹಕಾರ ರಥ, ಘಟೋತ್ಕಜ, ಚೆಂಡೆ. ಕೊಂಬು, ಸಹಕಾರಿ ಬಣ್ಣದ ಕೊಡೆಗಳು, ಭುವನೇಶ್ವರಿ ದೇವಿಯ ಸ್ತಬ್ಧಚಿತ್ರ, ಪುರುಷರ ಹಾಗೂ ಮಹಿಳೆಯರ ಡೊಳ್ಳು ಕುಣಿತ, ಮೊಳಹಳ್ಳಿ ಶಿವರಾವ್ ಸ್ತಬ್ಧಚಿತ್ರ, ಮಹಿಳೆಯರ ವೀರಗಾಸೆ, ಹೈನುಗಾರಿಕೆಯ ಸ್ತಬ್ಧಚಿತ್ರ. ಮೀನುಗಾರಿಕೆಯ ಸ್ತಬ್ಧಚಿತ್ರ. ಹೊನ್ನಾವರ ಬ್ಯಾಂಡ್. ಕೆ.ಎಂ.ಎಫ್. – ನಂದಿನಿ ಆನ್ ವೀಲ್ ಸ್ತಬ್ಧಚಿತ್ರ, ಸುಗ್ಗಿ ಕುಣಿತ, ತುಳುನಾಡು ವೈಭವ ಸ್ತಬ್ಧಚಿತ್ರ. ನವೋದಯ ಪ್ರಚಾರ ವಾಹನ, ಪುರವಂತಿಗೆ. ಗ್ರಾಮೀಣ ಬ್ಯಾಂಕಿಂಗ್ ಚಟುವಟಿಕೆಯ ಸ್ತಬ್ಧಚಿತ್ರ. ಚೆಂಡೆ ವಾಹನ, ಸೋಮನ ಕುಣಿತ, ಪಟ್ಟದ ಕುಣಿತ, ಶಿವನ ಮೂರ್ತಿಯ ಸ್ತಬ್ಧಚಿತ್ರ, ನವೋದಯ ಗುಂಪಿನ ಸಭೆ ನಡೆಸುವ ಸ್ತಬ್ಧಚಿತ್ರ, ಗೊರವರ ಕುಣಿತ, ಪ್ರಾಥಮಿಕ ಪತ್ತಿನ ಸಂಘದ ಸ್ತಬ್ಧಚಿತ್ರ, ಕೃಷಿ ಚಟುವಟಿಕೆಯ ಸ್ತಬ್ಧಚಿತ್ರ. ಉಳುಮೆ ಮಾಡುವ ರೈತನ ಸ್ತಬ್ಧಚಿತ್ರ ಗಮನ ಸೆಳೆಯಿತು.



























