ಮಕ್ಕಳಿಗೆ ಹೆಲ್ಮೆಟ್ ಬಳಕೆ ಕಡ್ಡಾಯ: ಹೈಕೋರ್ಟ್ ಆದೇಶ

ಬೆಂಗಳೂರು: ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಸುವ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ್ದಾದ ಆದೇಶ ನೀಡಿದೆ. ದ್ವಿಚಕ್ರ ವಾಹನಗಳ ಹಿಂಬದಿ ಸೀಟಿನಲ್ಲಿ ಪ್ರಯಾಣಿಸುವ ಮಕ್ಕಳಿಗೆ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸುವಂತೆ ಮತ್ತು ಈ ವಾಹನಗಳ ಗರಿಷ್ಠ ವೇಗ ಮಿತಿ ನಿಗದಿಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಕೇಂದ್ರ ಸರ್ಕಾರದ “ಮೋಟಾರು ವಾಹನ (2ನೇ ತಿದ್ದುಪಡಿ) ನಿಯಮಗಳು- 2022” ರ ನಿಯಮ 138(7) ಅನ್ನು ತಕ್ಷಣ ಜಾರಿಗೆ ತರಬೇಕು ಎಂದು ಹೈಕೋರ್ಟ್ ಆದೇಶಿಸಿದೆ.

ಕೇಂದ್ರ ಮೋಟಾರು ವಾಹನ ನಿಯಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಹಾಗೂ ಸಾಕಷ್ಟು ಪ್ರಮಾಣದಲ್ಲಿ ಮಕ್ಕಳ ಹೆಲ್ಮೆಟ್‌ ಮತ್ತು ಸುರಕ್ಷತಾ ಪರಿಕರಗಳ ಲಭ್ಯವಾಗಿಸಲು ತುರ್ತು ಕ್ರಮ ಕೈಗೊಳ್ಳಲು ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆಗೆ ನಿರ್ದೇಶಿಸುವಂತೆ ಕೋರಿ ಶಿವಮೊಗ್ಗದ ಡಾ.ಅರ್ಚನಾ ಭಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾ.ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ಮಾಡಿದೆ. ಕೇಂದ್ರ ಮೋಟಾರು ವಾಹನ ನಿಯಮಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಅಧಿಕಾರಿಗಳು ಹಲವು ಕ್ರಮಗಳನ್ನು ಕೈಗೊಂಡಿದ್ದರೂ, ವಾಸ್ತವವಾಗಿ ಈ ನಿಯಮ ಇನ್ನೂ ಜಾರಿಗೆ ತರಲಾಗಿಲ್ಲ. ಆದ್ದರಿಂದ, ನಿಯಮವನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಬೇಕಿದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಈ ನಿಟ್ಟಿನಲ್ಲಿ ತಕ್ಷಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆಗೆ ನಿರ್ದೇಶಿಸಿ, ಅರ್ಜಿಯನ್ನು ಇತ್ಯರ್ಥಪಡಿಸಿದೆ.

error: Content is protected !!