ಉಡುಪಿ: ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28ರಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಈ ನಿಮಿತ್ತ ಜಿಲ್ಲಾಡಳಿತ ಬಿಗಿ ಭದ್ರತಾ ವ್ಯವಸ್ಥೆ ಕೈಗೊಂಡಿದ್ದು, ಡ್ರೋನ್ ಹಾರಾಟ ನಿಷೇಧಿಸಿದೆ. ಉಡುಪಿಯ ಆಯ್ದ ಪ್ರದೇಶಗಳ ಶಾಲೆಗಳು ಮತ್ತು ಅಂಗನವಾಡಿಗಳಿಗೆ ಒಂದು ದಿನದ ರಜೆ ಘೋಷಿಸಿದೆ. ಅಂಗಡಿ ಮುಂಗಟ್ಟುಗಳನ್ನು ತಾತ್ಕಾಲಿಕವಾಗಿ ಮುಚ್ಚಲು ಸೂಚಿಸಿದೆ. ಸಾರ್ವಜನಿಕರಿಗೂ ಕೆಲವು ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

ಪ್ರಧಾನಿಯವರ ಭೇಟಿಯ ಸಂದರ್ಭದಲ್ಲಿ ಕೇಂದ್ರೀಯ ಸಚಿವರು, ಕರ್ನಾಟಕದ ರಾಜ್ಯಪಾಲರು, ಮುಖ್ಯಮಂತ್ರಿಗಳು, ರಾಜ್ಯ ಸಚಿವರು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸುವ ನಿರೀಕ್ಷೆ ಇದೆ. ಈ ಪ್ರೋಟೋಕಾಲ್ ವ್ಯವಸ್ಥೆಗಳು ಮತ್ತು ಹೆಚ್ಚಿದ ಭದ್ರತಾ ಕ್ರಮಗಳ ಭಾಗವಾಗಿ, ಕಾರ್ಯಕ್ರಮಗಳ ಸುಗಮ ನಿರ್ವಹಣೆಗಾಗಿ ಉಡುಪಿ ಜಿಲ್ಲಾ ಪೊಲೀಸರು ಮುನ್ನೆಚ್ಚರಿಕೆ ಕ್ರಮಗಳನ್ನು ಶಿಫಾರಸ್ಸು ಮಾಡಿದ್ದರು.

ನವೆಂಬರ್ 26 ಬೆಳಿಗ್ಗೆ 6 ಗಂಟೆಯಿಂದ ನವೆಂಬರ್ 28 ಸಂಜೆ 6 ಗಂಟೆಯವರೆಗೆ ನಗರದ 5 ಕಿ.ಮೀ ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ‘ನೋ ಫ್ಲೈ ಜೋನ್’ ಎಂದು ಘೋಷಿಸಲಾಗಿದೆ.