ಕಾಂಗ್ರೆಸ್‌ ಕಾರ್ಯಕರ್ತ ಗಣೇಶ್‌ ಗೌಡ ಬರ್ಬರ ಹತ್ಯೆ ಪ್ರಕರಣ: ಐವರು ಬಜರಂಗಿಗಳು ವಶಕ್ಕೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ, ಸಖರಾಯಪಟ್ಟಣ ಗ್ರಾಮ ಪಂಚಾಯತ್ ಸದಸ್ಯ‌, ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ(40)ನನ್ನು ಹತ್ಯೆ ಮಾಡಿದ ಆರೋಪಕ್ಕೆ ಸಂಬಂಧಿಸಿ ಐವರು ಬಜರಂಗದಳದ ಕಾರ್ಯಕರ್ತರನ್ನು ಸಖರಾಯಪಟ್ಟಣ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳಾದ ಸಂಜಯ್, ನಿತಿನ್, ನಾಗಭೂಷಣ್, ದರ್ಶನ್, ಅಜಯ್‌ ಸೇರಿದಂತೆ ಇತರರ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ. ಸದ್ಯ ಸಂಜಯ್, ನಾಗಭೂಷಣ, ಮಿಥುನ್‌ ಸೇರಿ ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.


ಘಟನೆಯ ನಂತರ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿದ ಶಾಸಕ ಆನಂದ್, ‘ಬ್ಯಾನರ್ ತೆರವು ವಿಚಾರವಾಗಿ ಗಲಾಟೆ ನಡೆದಿದೆ. ನಂತರ ಗಣೇಶ್ ಅವರನ್ನು ಕರೆಸಿ ಕೊಲೆ ಮಾಡಿದ್ದಾರೆ. ಈ ಪ್ರಕರಣದಲ್ಲಿ 8 ಜನರು ಶಾಮೀಲಾಗಿರುವ ಶಂಕೆ ಇದೆ. ಕೆಲವು ದಿನಗಳಿಂದಲೇ ಎರಡು ಗುಂಪುಗಳ ನಡುವೆ ಉದ್ವಿಗ್ನತೆ ಇತ್ತು. ಪೊಲೀಸರು ಸಮಯಕ್ಕೆ ಕ್ರಮ ಕೈಗೊಂಡಿದ್ದರೆ ಈ ಘಟನೆ ತಪ್ಪಿಸಬಹುದಿತ್ತು’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗಣೇಶ್ ಗೌಡ ಮುಂದೆ ಬರಲಿರುವ ಜಿಲ್ಲಾ ಪಂಚಾಯತ್‌ ಚುನಾವಣೆಯಲ್ಲಿ ಸಖರಾಯಪಟ್ಟಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಕೊಲೆಗೂ ಮುನ್ನ ಶುಕ್ರವಾರ ರಾತ್ರಿ 10:30ರ ವೇಳೆ ಸಖರಾಯಪಟ್ಟಣ ಬಾರ್ ಬಳಿ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿತ್ತು. ಬಾರ್ ಬಳಿ ಗಲಾಟೆ ನಡೆದ ಅರ್ಧ ಗಂಟೆ ನಂತರ ಮಠದ ಬಳಿ ಮತ್ತೆ ಗಲಾಟೆ ನಡೆದಿದೆ. ಈ ಗಲಾಟೆ ವಿಕೋಪಕ್ಕೆ ಹೋಗಿ ಮಚ್ಚಿನಿಂದ ಗಣೇಶ್‌ ಮೇಲೆ ಹಲ್ಲೆ ನಡೆದು ಹತ್ಯೆ ಮಾಡಲಾಗಿದೆ. ಎದುರಾಳಿ ಗುಂಪಿನ ಇಬ್ಬರ ತಲೆಗೂ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗಲಾಟೆಯಲ್ಲಿ ಆರೋಪಿ ಸಂಜಯ್ ತಲೆಗೂ ಗಂಭೀರ ಗಾಯವಾಗಿದ್ದು, ಆತನನ್ನು ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಳಿಕ ಸಖರಾಯಪಟ್ಟಣದಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. ಆರೋಪಿಗಳ ಪತ್ತೆಗೆ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಚಿಕ್ಕಮಗಳೂರು ಎಸ್‌ಪಿ ವಿಕ್ರಮ್ ಆಮ್ಟೆ ತಿಳಿಸಿದ್ದಾರೆ. ಗಲಾಟೆಯಲ್ಲಿ ಶಾಮೀಲಾದ ಇಬ್ಬರು ಈಗಾಗಲೇ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

error: Content is protected !!