ಬೆಳ್ತಂಗಡಿ: ಅಪ್ರಾಪ್ತ ಬಾಲಕರ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಜುವೆಲ್ಲರಿ ಅಂಗಡಿಯ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

ಪೊಲೀಸ್ ಮೂಲಗಳ ಪ್ರಕಾರ, ದಿನಾಂಕ 15-12-2025ರ ಸಂಜೆ, ಅಪ್ರಾಪ್ತ ಪ್ರಾಯದ ದೂರುದಾರ ತಮ್ಮ ಇಬ್ಬರು ಸ್ನೇಹಿತರೊಂದಿಗೆ ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿರುವ ಜುವೆಲ್ಲರಿ ಅಂಗಡಿಯೊಂದರ ಹಿಂಭಾಗಕ್ಕೆ ಬಹಿರ್ದೆಸೆಗೆ ತೆರಳಿದ್ದರು. ಆಗ ಜುವೆಲ್ಲರಿಯ ಸಿಬ್ಬಂದಿ ಅಲ್ಲಿಗೆ ಬಂದು ಬಾಲಕರನ್ನು ತಡೆದು ನಿಲ್ಲಿಸಿದ್ದಾರೆ. ಬಾಲಕರು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾರೆ ಎಂಬ ಶಂಕೆ ವ್ಯಕ್ತಪಡಿಸಿ, ಅವರೊಂದಿಗೆ ತಕರಾರು ನಡೆಸಿ ಮೂವರ ಮೇಲೂ ಹಲ್ಲೆ ನಡೆಸಿದ್ದಾರೆ ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಸಂಬಂಧ ದೂರಿನ ಮೇರೆಗೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 143/2025ನ್ನು ದಾಖಲಿಸಿಕೊಂಡು, ಭಾರತೀಯ ನ್ಯಾಯ ಸಂಹಿತೆ–2023ರ ಕಲಂ 126(2) ಮತ್ತು 115(1)ರ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.
ಇದಕ್ಕೆ ಪ್ರತಿಯಾಗಿ, ಜ್ಯುವೆಲ್ಲರಿಯ ಸಿಬ್ಬಂದಿ ಕೂಡ ದಿನಾಂಕ 17-12-2025ರಂದು ಬಾಲಕರ ವಿರುದ್ಧ ಪೊಲೀಸ್ ಠಾಣೆಗೆ ಪ್ರತಿದೂರು ಸಲ್ಲಿಸಿದ್ದು, ಈ ಪ್ರಕರಣದ ಕುರಿತಂತೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದಾಗಿ ಪೊಲೀಸರು ತಿಳಿಸಿದ್ದಾರೆ.
ಘಟನೆಯ ಸತ್ಯಾಸತ್ಯತೆ ಕುರಿತು ತನಿಖೆ ನಡೆಯುತ್ತಿದ್ದು, ಎರಡೂ ಪಾರ್ಟಿಗಳ ದೂರಿನ ಆಧಾರದ ಮೇಲೆ ಪೊಲೀಸರು ವಿವರಗಳನ್ನು ಸಂಗ್ರಹಿಸುತ್ತಿದ್ದಾರೆ.