ಕಾಂಗ್ರೆಸ್ ಪ್ರತಿಭಟನೆ ವೇಳೆ ಎಎಸ್‌ಐ ಚಿನ್ನದ ಮಾಂಗಲ್ಯ ಸರ ಕಳವು: ಬಿಕ್ಕಿ ಬಿಕ್ಕಿ ಅತ್ತ ಲೇಡಿ ಪೊಲೀಸ್!

ಶಿವಮೊಗ್ಗ: ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ, ಬಂದೋಬಸ್ತ್ ನಿರತರಾಹಿದ್ದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರ ಕೊರಳಲ್ಲಿದ್ದ ಸುಮಾರು 40 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಕಳ್ಳರು ಎಗರಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಕೋಟೆ ಪೊಲೀಸ್ ಠಾಣೆಯ ಎಎಸ್‌ಐ ಅಮೃತಾ ಮಾಂಗಲ್ಯ ಸರ ಕಳೆದುಕೊಂಡವರು.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಗಾಂಧಿ ಕುಟುಂಬದ ವಿರುದ್ಧ ಬಿಜೆಪಿ ನಾಯಕರು ಪಿತೂರಿ ನಡೆಸುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಕಾರ್ಯಕರ್ತರು ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದರು. ಈ ಹಿನ್ನೆಲೆಯಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ, ಪೊಲೀಸರು ಮುತ್ತಿಗೆ ಹಾಕಿದ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲು ಮುಂದಾದಾಗ ತಳ್ಳಾಟ–ಜಟಾಪಟಿ ನಡೆದಿದೆ. ಈ ವೇಳೆ ಕರ್ತವ್ಯದಲ್ಲಿದ್ದ ಎಎಸ್‌ಐ ಅಮೃತಾ, ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುತ್ತಿದ್ದ ಸಂದರ್ಭದಲ್ಲೇ ಅವರ ಕೊರಳಲ್ಲಿದ್ದ ಚಿನ್ನದ ಕರಿಮಣಿ ಸರ ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದೆ.

ಘಟನೆ ತಿಳಿಯುತ್ತಿದ್ದಂತೆ ಎಎಸ್‌ಐ ಅಮೃತಾ ಅವರು ಕಣ್ಣೀರು ಹಾಕಿದ್ದಾರೆ. ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯೊಬ್ಬರ ಚಿನ್ನದ ಸರವೇ ಪ್ರತಿಭಟನೆಯ ನಡುವೆ ಕಳವಾಗಿರುವುದು ಪೊಲೀಸ್ ಇಲಾಖೆಗೆ ಮುಜುಗರ ಪರಿಸ್ಥಿತಿ ತಂದೊಡ್ಡಿದೆ. ಸ್ಥಳದಲ್ಲಿದ್ದ ಹಿರಿಯ ಹಾಗೂ ಇತರ ಪೊಲೀಸ್ ಅಧಿಕಾರಿಗಳು ಅಮೃತಾಗೆ ಧೈರ್ಯ ತುಂಬಿ, ಕಳ್ಳನನ್ನು ಬಂಧಿಸುವ ಭರವಸೆ ನೀಡಿದ್ದಾರೆ.

ಪ್ರತಿಭಟನೆ ಸಂದರ್ಭ ಸೆರೆಹಿಡಿಯಲಾದ ವೀಡಿಯೊ ದೃಶ್ಯಗಳು ಹಾಗೂ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ದಾಖಲೆಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

error: Content is protected !!