ಮಂಗಳೂರು: ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಘಟನೆಯಾದ ಅಖಿಲ ಭಾರತ ಮುಂಡಾಲ ಯುವ ವೇದಿಕೆ (ರಿ.), ಮಂಗಳೂರು ವತಿಯಿಂದ ಮುಂಡಾಲ ಸಮಾಜ ಬಾಂಧವರ 16ನೇ ವರ್ಷದ ಮುಂಡಾಲ ಸಮ್ಮಿಲನ ಕಾರ್ಯಕ್ರಮವನ್ನು ಡಿಸೆಂಬರ್ 28ರಂದು ಭಾನುವಾರ ಸಂಜೆ 5 ಗಂಟೆಗೆ ಉರ್ವಸ್ಟೋರ್‌ನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಅಧ್ಯಕ್ಷ ಪ್ರದೀಪ್ ಕಾಪಿಕಾಡ್ ತಿಳಿಸಿದ್ದಾರೆ.

ನಗರದ ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಸಂದರ್ಭ ಐಲೇಸ–03 ಜಿಲ್ಲಾ ಮಟ್ಟದ ಜಾನಪದ ನೃತ್ಯ ಸ್ಪರ್ಧೆ ನಡೆಯಲಿದ್ದು, 2024–25ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ ಪರೀಕ್ಷೆಗಳಲ್ಲಿ ಅಧಿಕ ಅಂಕ ಗಳಿಸಿದ ಮುಂಡಾಲ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ಇದಲ್ಲದೆ 2026ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ, ಗ್ರಾಮೀಣ ಕ್ರೀಡಾಕೂಟದ ವಿಜೇತರಿಗೆ ಪ್ರಶಸ್ತಿ ಪ್ರದಾನ ಕೂಡ ಇದೇ ಕಾರ್ಯಕ್ರಮದಲ್ಲಿ ನಡೆಯಲಿದೆ. ಸಭಾ ಕಾರ್ಯಕ್ರಮದಲ್ಲಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಸಮಾಜದ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.

ಮುಂಡಾಲ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪ್ರದೀಪ್ ಕಾಪಿಕಾಡ್ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ಪ್ರತಾಪ್ ಸಾಲ್ಯಾನ್ ಕದ್ರಿ, ಸ್ಥಾಪಕಾಧ್ಯಕ್ಷ ಕಿರಣ್ ಕುಮಾರ್ ಕೊಡಿಯಾಲ್‌ಬೈಲ್, ಉಪಾಧ್ಯಕ್ಷ ಪ್ರಕಾಶ್ ಕೋಡಿಕಲ್, ಕ್ರೀಡಾ ಕಾರ್ಯದರ್ಶಿ ಸಂದೀಪ್ ಬೋಳೂರು ಹಾಗೂ ಕೊಶಾಧಿಕಾರಿ ರವಿ ಕಾಪಿಕಾಡ್ ಉಪಸ್ಥಿತರಿದ್ದರು.