ಪತನಂತಿಟ್ಟ: ಶಬರಿಮಲೆ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್ ಒಂದು ಸೋಮವಾರ ಬೆಳಗಿನ ಜಾವ ಪುನಲೂರು–ಮುವಾಟ್ಟುಪುಳ ರಸ್ತೆಯ ಇಟ್ಟಿಯಪ್ಪರ ವಲಿಯಪರಂಬುಪಾಡಿ ಜಂಕ್ಷನ್‌ನಲ್ಲಿ ಅಂಗಡಿಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಮಕ್ಕಳು ಸೇರಿದಂತೆ ಆರು ಮಂದಿ ಗಾಯಗೊಂಡಿದ್ದಾರೆ.

ಮೃತರನ್ನು ಆಂಧ್ರಪ್ರದೇಶ ಮೂಲದ ಸಿರಿಸೆಟ್ಟಿ ರಾಜೇಶ್ ಗೌಡ ಎಂದು ಪೊಲೀಸರು ಗುರುತಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ನಾಲ್ವರನ್ನು ಕೊಟ್ಟಾಯಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದ ಗಾಯಾಳುಗಳು ಸಮೀಪದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಘಟನೆ ಬೆಳಗಿನ ಜಾವ ಸುಮಾರು 1.30ರ ವೇಳೆಗೆ ಸಂಭವಿಸಿದೆ. ಶಬರಿಮಲೆ ಅಯ್ಯಪ್ಪ ಸ್ವಾಮಿಯ ಭಕ್ತರಿಗೆ ಅನ್ನದಾನ ಆಯೋಜಿಸುವ ಗುಂಪಿನ ಭಾಗವಾಗಿದ್ದ ಯಾತ್ರಿಕರು ಕುಟ್ರಾಲಂ ಪ್ರವಾಸ ಮುಗಿಸಿ ಹಿಂತಿರುಗುತ್ತಿದ್ದರು ಎಂದು ತಿಳಿದುಬಂದಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಚಾಲಕ ನಿದ್ರೆಗೆ ಒಳಗಾದ ಪರಿಣಾಮ ವಾಹನ ನಿಯಂತ್ರಣ ತಪ್ಪಿ ರಸ್ತೆಯಿಂದ ಹೊರಗುಳಿ ಅಂಗಡಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಘಟನೆಯ ಬಗ್ಗೆ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.