ಮಲ್ಪೆ: ಪ್ರವಾಸಿಗರನ್ನು ವಿಹಾರಕ್ಕೆ ಕರೆದೊಯ್ಯುತ್ತಿದ್ದ ದೋಣಿಯೊಂದು ಸಮುದ್ರದಲ್ಲಿ ಮಗುಚಿ ಬಿದ್ದ ಪರಿಣಾಮ ಇಬ್ಬರು ಗಂಭೀರ ಸೇರಿದಂತೆ ಹಲವರು ಅಸ್ವಸ್ಥಗೊಂಡ ಘಟನೆ ಸೋಮವಾರ ಬೆಳಗ್ಗೆ ಕೋಡಿಬೆಂಗ್ರೆ ಬೀಚ್ ಸಮೀಪ ನಡೆದಿದೆ.

ಸ್ಥಳೀಯ ರೆಸಾರ್ಟ್‌ನಲ್ಲಿ ತಂಗಿದ್ದ ಪ್ರವಾಸಿಗರನ್ನು ವಿಹಾರಕ್ಕಾಗಿ ದೋಣಿಯಲ್ಲಿ ಸಮುದ್ರಕ್ಕೆ ಕರೆದೊಯ್ಯಲಾಗುತ್ತಿತ್ತು. ದೋಣಿಯಲ್ಲಿ ಸುಮಾರು 10 ಮಂದಿ ಪ್ರವಾಸಿಗರು ಇದ್ದು, ಅವರಲ್ಲಿ ಯಾರೂ ಕೂಡ ಲೈಫ್ ಜಾಕೆಟ್ ಧರಿಸಿರಲಿಲ್ಲ ಎಂದು ತಿಳಿದುಬಂದಿದೆ.

ಸಮುದ್ರದಲ್ಲಿ ಸಾಗುತ್ತಿದ್ದ ವೇಳೆ ದೋಣಿ ಅಕಸ್ಮಿಕವಾಗಿ ಪಲ್ಟಿಯಾಗಿ ಎಲ್ಲ ಪ್ರವಾಸಿಗರು ನೀರಿಗೆ ಬಿದ್ದಿದ್ದಾರೆ. ಸ್ಥಳೀಯರ ಸಹಕಾರದಿಂದ ಹಲವರನ್ನು ರಕ್ಷಿಸಲಾಗಿದ್ದು, ಈ ಪೈಕಿ ನಾಲ್ವರು ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ಇವರಲ್ಲಿ ಇಬ್ಬರು ಗಂಭೀರ ಸ್ಥಿತಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ದೋಣಿ ವಿಹಾರದಲ್ಲಿ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿರುವ ಬಗ್ಗೆ ತನಿಖೆ ಮುಂದುವರಿದಿದೆ.