ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ತಾಯಿ-ಮಗಳು ಹೋಗುತ್ತಿದ್ದ ವೇಳೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ತಾಯಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬಾಣಸವಾಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಾಬೂಸಾಬ್ ಪಾಳ್ಯದ ನಿವಾಸಿ ಅರುಣಾ (42) ಮೃತ ಮಹಿಳೆ. ಮಗಳು ನಂದಿನಿಗೆ ಸಣ್ಣ ಪುಟ್ಟ ತರಚಿದ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ತೆರಳಿದ್ದಾರೆ.

ನಂದಿನಿ ಅವರು ತಾಯಿಯನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೆಬ್ಬಾಳದ ಕಡೆ ಹೋಗುತ್ತಿದ್ದ ವೇಳೆ ರಿಂಗ್ ರಸ್ತೆಯ ಹೆಣ್ಣೂರು ಜಂಕ್ಷನ್ ಅಂಡರ್ ಪಾಸ್‌ನಲ್ಲಿ ಹೋಗುತ್ತಿದ್ದಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ನಿಯಂತ್ರಣ ತಪ್ಪಿ ತಾಯಿ ಮಗಳು ದ್ವಿಚಕ್ರ ವಾಹನದಿಂದ ಇಬ್ಬರೂ ಕೆಳಗೆ ಬಿದ್ದಿದ್ದಾರೆ. ಆ ಸಂದರ್ಭದಲ್ಲಿ ಕಾರು ಅರುಣಾ ಅವರ ಮೇಲೆ ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅತಿ ವೇಗದ ಚಾಲನೆಯಿಂದಾಗಿ ಈ ದುರ್ಘಟನೆ ನಡೆದಿದೆ. ಚಾಲಕ ಅನಾಸ್ ಹಾಗೂ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.