ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: 12 ಆರೋಪಿಗಳಿಗೆ 5 ವರ್ಷ ಕಠಿಣ ಶಿಕ್ಷೆ ಪ್ರಕಟ

ಬೆಳಗಾವಿ: ವಂಟಮೂರಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿ ಅಪರಾಧಿಗಳಿಗೆ ತಲಾ ಐದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ಬೆಳಗಾವಿ ಹೆಚ್ಚುವರಿ 10ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ನ್ಯಾಯಾಧೀಶ ಎಚ್.ಎಸ್. ಮಂಜುನಾಥ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ದೋಷಿಗಳೆಂದು ತೀರ್ಮಾನಿಸಿ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಶಿಕ್ಷೆಗೆ ಗುರಿಯಾದ ಆರೋಪಿಗಳನ್ನು ಬಸಪ್ಪ ನಾಯಿಕ, ರಾಜು ನಾಯಿಕ, ಕೆಂಪಣ್ಣ ನಾಯಿಕ, ಪಾರ್ವತಿ ನಾಯಿಕ, ಯಲ್ಲವ್ವ ನಾಯಿಕ, ಲಕ್ಕಪ್ಪ ನಾಯಿಕ, ಗಂಗವ್ವ ನಾಯಿಕ, ಸಂಗೀತಾ ಹೆಗ್ಗನಾಯಿಕ, ಸಂತೋಷ ನಾಯಿಕ, ಶೋಭಾ ನಾಯಿಕ, ಲಕ್ಕವ್ವ ನಾಯಿಕ ಹಾಗೂ ಶಿವಪ್ಪ ವನ್ನೂರಿ ಎಂದು ಗುರುತಿಸಲಾಗಿದೆ.

ವಂಟಮೂರಿಯಲ್ಲಿ ನಡೆದ ಈ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಮಹಿಳೆಯನ್ನು ಸಾರ್ವಜನಿಕವಾಗಿ ಅವಮಾನಿಸಿ, ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ಜನಾಕ್ರೋಶಕ್ಕೆ ಕಾರಣವಾಗಿತ್ತು.

ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯವು ಸಾಕ್ಷ್ಯಾಧಾರಗಳು, ಸಾಕ್ಷಿಗಳ ಹೇಳಿಕೆಗಳು ಮತ್ತು ತನಿಖಾ ವರದಿಗಳನ್ನು ಪರಿಗಣಿಸಿ ಆರೋಪಿಗಳು ಅಪರಾಧ ಎಸಗಿರುವುದು ಸಾಬೀತಾಗಿದೆ ಎಂದು ತೀರ್ಮಾನಿಸಿದೆ.

ತೀರ್ಪು ಪ್ರಕಟವಾಗುತ್ತಿದ್ದಂತೆ ನ್ಯಾಯಾಲಯದೊಳಗೆ ಆರೋಪಿಗಳು ಹಾಗೂ ಅವರ ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ.

error: Content is protected !!