ಕೋಟ: ವಿಶ್ವಕಪ್ ಟಿ–20 ಕ್ರಿಕೆಟ್ ಪಂದ್ಯಾಟಕ್ಕೆ ಸಂಬಂಧಿಸಿ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದಲ್ಲಿ ಕೋಟ ಪೊಲೀಸರು ಓರ್ವ ಯುವಕನನ್ನು ಬಂಧಿಸಿದ್ದಾರೆ. ಬಂಧಿತನನ್ನು ಬ್ರಹ್ಮಾವರ ತಾಲೂಕಿನ ಬಾಳ್ಕುದ್ರು ಗ್ರಾಮದ ಹಂಗಾರಕಟ್ಟೆ ನಿವಾಸಿ ಮನಿತ್ (26) ಎಂದು ಗುರುತಿಸಲಾಗಿದೆ.

ಫೆಬ್ರವರಿ 9ರಂದು ಪಾಂಡೇಶ್ವರ ಗ್ರಾಮದ ಕೋಸ್ಟಲ್ ಪ್ಯಾರಡೈಸ್ ಹೋಟೆಲ್ ಸಮೀಪದ ಪಾಂಡೇಶ್ವರ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಕೋಟ ಪೊಲೀಸ್ ಉಪನಿರೀಕ್ಷಕ ಪ್ರವೀಣ್ ಕುಮಾರ್ ಆರ್. ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದರು. ಈ ವೇಳೆ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಇತರ ಸಾರ್ವಜನಿಕರು ಸ್ಥಳದಿಂದ ಪರಾರಿಯಾಗಿದ್ದು, ಬೆಟ್ಟಿಂಗ್ ನಡೆಸುತ್ತಿದ್ದ ಮನಿತ್‌ನನ್ನು ಪೊಲೀಸರು ವಶಕ್ಕೆ ಪಡೆದರು.

ಬಂಧಿತನ ವಶದಲ್ಲಿದ್ದ ಕ್ರಿಕೆಟ್ ಬೆಟ್ಟಿಂಗ್‌ಗೆ ಬಳಸುತ್ತಿದ್ದ ಐಫೋನ್ ಮೊಬೈಲ್ ಹಾಗೂ 800 ರೂ. ನಗದುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ತನಿಖೆಯಿಂದ, ಆರೋಪಿತನು ಒಮಾನ್ – ಝಿಂಬಾಬ್ವೆ ನಡುವಿನ ಟಿ–20 ಕ್ರಿಕೆಟ್ ಪಂದ್ಯಕ್ಕೆ ಸಂಬಂಧಿಸಿ ಮೊಬೈಲ್‌ನಲ್ಲಿರುವ ಆನ್‌ಲೈನ್ ಅಪ್ಲಿಕೇಶನ್ ಮೂಲಕ ಸಂಘಟಿತವಾಗಿ ಇತರರೊಂದಿಗೆ ಸೇರಿಕೊಂಡು ಅಕ್ರಮವಾಗಿ ಬೆಟ್ಟಿಂಗ್ ನಡೆಸುತ್ತಿದ್ದುದಾಗಿ ತಿಳಿದುಬಂದಿದೆ.
ಈ ಸಂಬಂಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
