
ದೇವನಹಳ್ಳಿ: ಹೊಸಕೋಟೆ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಬೈಕ್ ಹಾಗೂ ಎಕ್ಸ್ ಯುವಿ ಕಾರಿನ ನಡುವೆ ಸರಣಿ ಡಿಕ್ಕಿ ಸಂಭವಿಸಿದ್ದು, ಸ್ಥಳದಲ್ಲೇ ಕಾರಿನಲ್ಲಿದ್ದ ಆರು ಮಂದಿ ಮತ್ತು ಬೈಕ್ ಸವಾರ ಸಾವನ್ನಪ್ಪಿರುವ ಭೀಕರ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ಇಂದು(ಫೆ.13) ಬೆಳಗ್ಗೆ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರಲ್ಲಿ ಆರು ಮಂದಿ ಬೆಂಗಳೂರಿನ ಕೊತ್ತನೂರು ಮೂಲದವರು ಎಂದು ತಿಳಿದುಬಂದಿದೆ.
ಹೆದ್ದಾರಿಯಲ್ಲಿ ಸಾಗುತ್ತಿದ್ದ ಎಕ್ಸ್ ಯುವಿ ಕಾರು ಮೊದಲು ಮುಂದೆ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಬಳಿಕ ನಿಯಂತ್ರಣ ತಪ್ಪಿ ಕ್ಯಾಂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿರಬಹುದೆಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅತಿವೇಗವೇ ಅಪಘಾತಕ್ಕೆ ಕಾರಣ ಎಂಬುದಾಗಿ ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ