ಮಂಗಳೂರು: ಬೆಂಗಳೂರು ನಗರದಿಂದ ನಿಷೇಧಿತ ಮಾದಕ ವಸ್ತು ಎಂಡಿಎಂಎ ಅನ್ನು ಖರೀದಿಸಿಕೊಂಡು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಮೂವರನ್ನು ಗುರುವಾರ(ಫೆ12)ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಕಾರಿನಲ್ಲಿ ಉಳ್ಳಾಲದ ತಲಪಾಡಿಯ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳಾದ ಉಳ್ಳಾಲದ ನಿವಾಸಿಗಳಾದ ಮುಸ್ತಫಾ ಸೀದಿಯಬ್ಬ(34)ಮೈಯದ್ದಿ(28), ಮೊಹಮ್ಮದ್ ಶಿಫಾನ್(28) ಎಂಬವರನ್ನು ಬಂಧಿಸಿದ್ದಾರೆ. 11,90,000 ರೂ. ಮೌಲ್ಯದ 118.13 ಗ್ರಾಂ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ, ಮೊಬೈಲ್ ಫೋನ್-4ಕಾರು ಸಹಿತ ಒಟ್ಟು 17,95,000 ರೂ.ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಮುಸ್ತಫಾ ಸೀದಿಯಬ್ಬನ ಮೇಲೆ ಈ ಹಿಂದೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದನ ಕಳ್ಳತನ ಪ್ರಕರಣ ಮತ್ತು ಮೈಯದ್ದಿ ಎಂಬಾತನ ಮೇಲೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣವೂ ದಾಖಲಾಗಿದೆ.

ಈ ಮಾದಕವಸ್ತು ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.