ಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ನೌಕರರು “ಬೆಂಗಳೂರು ಚಲೋ” ಕ್ಕೆ ಕರೆ ನೀಡಿರುವುದರಿಂದ ಹಲವರು ಕರ್ತವ್ಯಕ್ಕೆ ಗೈರಾಗುವ ಸಾಧ್ಯತೆ ಇದ್ದು, ಪರಿಣಾಮವಾಗಿ ಗುರುವಾರ(ಫೆ.19) ರಾಜ್ಯಾದ್ಯಂತ ಕೆಎಸ್‌ಆರ್‌ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಇದರ ನಡುವೆಯೇ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷಾ, ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ನೌಕರರಿಗೆ ಸೂಚನೆ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿರುವ ಅವರು, ಕರ್ತವ್ಯಕ್ಕೆ ಗೈರಾದಲ್ಲಿ ವೇತನ ಕಡಿತ ಸೇರಿದಂತೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಗೈರಾಗುವ ನೌಕರರ ಪಟ್ಟಿಯನ್ನು ಘಟಕವಾರು ಸಿದ್ಧಪಡಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. “ಕೆಲಸ ಮಾಡದಿದ್ದಾಗ ವೇತನವಿಲ್ಲ” ಎಂಬ ತತ್ವದಡಿ ಕ್ರಮ ಜರುಗಿಸಲಾಗುತ್ತದೆ ಎಂದು ಎಂಡಿ ಸ್ಪಷ್ಟಪಡಿಸಿದ್ದಾರೆ.

ಗುರುವಾರ ಬಸ್ ಸಂಚಾರದಲ್ಲಿ ವ್ಯತ್ಯಯ ಆಗದಂತೆ ಕ್ರಮಕೈಗೊಳ್ಳಬೇಕೆಂದು ಸಾರಿಗೆ ಅಧಿಕಾರಿಗಳಿಗೆ ಕೆಎಸ್‌ಆರ್‌ಟಿಸಿ ಎಂಡಿ ಅಕ್ರಂ ಪಾಷಾ ಸೂಚನೆ ನೀಡಿದ್ದಾರೆ. ತುರ್ತು, ಅನಿವಾರ್ಯ ಸಂದರ್ಭ ಹೊರತುಪಡಿಸಿ ನೌಕರರಿಗೆ ಯಾವುದೇ ರಜೆ ನೀಡಬೇಡಿ. ಇದು ವಾರದ ರಜೆ ಅಥವಾ ದೀರ್ಘಾವಧಿ ರಜೆಯಲ್ಲಿರುವವರಿಗೆ ಅನ್ವಯಿಸುವುದಿಲ್ಲ. ಅಗತ್ಯವಿದ್ದರೆ ವಾರದ ರಜೆಯನ್ನು ರದ್ದುಪಡಿಸಿ ಕೆಲಸಕ್ಕೆ ನಿಯೋಜಿಸಬೇಕು ಎಂದು ಅಕ್ರಂ ಪಾಷಾ ನಿರ್ದೇಶನ ನೀಡಿದ್ದಾರೆ.
01-01-2020ರಿಂದ 28-02-2023ರ ವರೆಗಿನ 38 ತಿಂಗಳ ವೇತನ ಪರಿಷ್ಕರಣೆಯ ಹಿಂಬಾಕಿ ಹಾಗೂ 01.01.2024 ರಿಂದ ನಾಲ್ಕು ವರ್ಷಗಳ ವೇತನ ಒಪ್ಪಂದ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಸಾರಿಗೆ ನೌಕರರು ಆಗ್ರಹಿಸುತ್ತಿದ್ದಾರೆ. ಈ ಹಿಂದೆ ಮುಷ್ಕರ ನಡೆಸಿದ್ದಾಗ ಮನವೊಲಿಸಿದ್ದ ಸರ್ಕಾರ, ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿತ್ತು. ಆದರೆ, ನಂತರ ಕ್ರಮ ಕೈಗೊಂಡಿರಲಿಲ್ಲ.