
ಕೊಲೆ, ಕೊಲೆಯತ್ನ ಸೇರಿದಂತೆ 31ಕ್ಕೂ ಹೆಚ್ಚು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿ
ಮಂಗಳೂರು: ಕೊಲೆ, ಕೊಲೆಯತ್ನ ಸೇರಿದಂತೆ 31ಕ್ಕೂ ಹೆಚ್ಚು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ 9 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ಶೀಟರ್ ಹಳೆಯಂಗಡಿ ನಿವಾಸಿ 42 ವರ್ಷ ಪ್ರಾಯದ ಸಫಾನ್ ಹುಸೇನ್ ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿ ಕಾರ್ಯಾಚರಣೆಯ ಮೂಲಕ ಬಂಧಿಸಿದ್ದಾರೆ.

ಹಳೆಯಂಗಡಿ ಮೂಲದ ಹಮ್ಮಬ್ಬ ಎಂಬುವವರ ಮಗ ಸಫಾನ್ ಹುಸೇನ್ ಮೇಲೆ ಮಂಗಳೂರು ಮತ್ತು ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ 31ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.
2008ರಲ್ಲಿ ಹಳೆಯಂಗಡಿಯಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಪ್ರವೀಣ್ ಎಂಬವರ ಅಪಹರಣ ಮತ್ತು ಕೊಲೆ ಪ್ರಕರಣ, 2017ರಲ್ಲಿ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಲತೀಫ್ ಸಫಾನ್ ಎಂಬುವವರ ಕೊಲೆ ಪ್ರಕರಣದಲ್ಲಿ ಸಫಾನ್ ನೇರ ಭಾಗಿಯಾಗಿದ್ದ.
2017ರ ಕೊಲೆ ಪ್ರಕರಣದ ನಂತರ ಈತ ಆಂಧ್ರಪ್ರದೇಶದ ರಾಯಚೋಟಿಯಲ್ಲಿ ತನ್ನ ಹೆಸರನ್ನು ಉಮರ್ ಮೊಹಮ್ಮದ್ ನಾಸಿರ್ ಎಂದು ಬದಲಾಯಿಸಿಕೊಂಡಿದ್ದ. ನಕಲಿ ದಾಖಲೆಗಳ ಮೂಲಕ ಆಧಾರ್ ಕಾರ್ಡ್ ಮತ್ತು ಪಾಸ್‌ಪೋರ್ಟ್ ಪಡೆದು 2018ರಲ್ಲಿ ವಿದೇಶಕ್ಕೆ ಪರಾರಿಯಾಗಿದ್ದ.
ವಿದೇಶದಲ್ಲಿದ್ದುಕೊಂಡೇ ಮಂಗಳೂರು ಮೂಲದ ಉದ್ಯಮಿಗಳಿಗೆ ಫೋನ್ ಕರೆ ಮಾಡಿ ಜೀವ ಬೆದರಿಕೆ ಹಾಕಿ ಹಣಕ್ಕಾಗಿ ಬೇಡಿಕೆಯಿಡುತ್ತಿದ್ದ ಬಗ್ಗೆ ದೂರುಗಳು ದಾಖಲಾಗಿದ್ದವು.
ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಆಂಧ್ರಪ್ರದೇಶದ ರಾಯಚೋಟಿಯಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪ್ರಸ್ತುತ ಈತನನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಮುಲ್ಕಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ಆರೋಪಿಗೆ ತಲೆಮರೆಸಿಕೊಳ್ಳಲು, ನಕಲಿ ದಾಖಲೆಗಳನ್ನು ಸೃಷ್ಟಿಸಲು ಮತ್ತು ವಿದೇಶಕ್ಕೆ ಪರಾರಿಯಾಗಲು ಸಹಕರಿಸಿದವರ ಬಗ್ಗೆಯೂ ತನಿಖೆ ಮುಂದುವರಿಯಲಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.