ಮಂಗಳೂರು: ಅನಧಿಕೃತ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಅನುಕೂಲವಾಗುವಂತೆ ಹೈಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಅನುಮತಿ ಅರ್ಜಿ (SLP) ಸಲ್ಲಿಸುವಂತೆ ಒತ್ತಾಯಿಸಿ ಇಂಡಿಯನ್ ವೆಹಿಕಲ್ಸ್ ಡ್ರೈವರ್ ಟ್ರೇಡ್ ಯೂನಿಯನ್ ಹಾಗೂ ಸ್ನೇಹಜೀವಿ ಚಾಲಕರ ಟ್ರೇಡ್ ಯೂನಿಯನ್ ಒಕ್ಕೂಟಗಳು ಕೇಂದ್ರ ಸರ್ಕಾರವನ್ನು ಆಗ್ರಹಿಸಿವೆ.

ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಮುಖಂಡರು, ಮೋಟಾರ್ ವಾಹನಗಳ ಕಾಯ್ದೆ 1988ರ ಅಡಿಯಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಯಾವುದೇ ನೇರ ಪರವಾನಗಿ ಇಲ್ಲದಿದ್ದರೂ ಸಾರ್ವಜನಿಕ ಸುರಕ್ಷತೆಯನ್ನು ನಿರ್ಲಕ್ಷಿಸಿ ಇಂತಹ ಸೇವೆಗಳಿಗೆ ಅವಕಾಶ ನೀಡುವುದು ಅಪಾಯಕಾರಿ ಎಂದು ಎಚ್ಚರಿಸಿದ್ದಾರೆ. ಅಪಘಾತಗಳ ಅಂಕಿ-ಅಂಶಗಳನ್ನು ಗಮನಿಸಿದರೆ ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಕರ ಸಾರಿಗೆ ನಡೆಸುವುದರಿಂದ ಜೀವಭದ್ರತೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಹೆಚ್ಚಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪರವಾನಗಿ ಪಡೆಯುವುದು ಮೂಲಭೂತ ಹಕ್ಕಲ್ಲ ಎಂದು ಸುಪ್ರೀಂ ಕೋರ್ಟ್ ಈ ಹಿಂದೆ ಸ್ಪಷ್ಟಪಡಿಸಿರುವುದನ್ನು ನೆನಪಿಸಿದ ಒಕ್ಕೂಟದ ನಾಯಕರು, ಸಾರ್ವಜನಿಕ ಹಿತದೃಷ್ಟಿಯಿಂದ ಸಾರಿಗೆ ವ್ಯವಸ್ಥೆಯನ್ನು ನಿಯಂತ್ರಿಸುವ ಅಧಿಕಾರ ರಾಜ್ಯ ಸರ್ಕಾರಕ್ಕಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ನಿಯಮಾನುಸಾರ ಪರವಾನಗಿ ಪಡೆದು ತೆರಿಗೆ ಪಾವತಿಸುತ್ತಿರುವ ಸುಮಾರು 25 ಲಕ್ಷಕ್ಕೂ ಅಧಿಕ ಆಟೋ ಹಾಗೂ ಟ್ಯಾಕ್ಸಿ ಚಾಲಕರ ಜೀವನೋಪಾಯಕ್ಕೆ ಬೈಕ್ ಟ್ಯಾಕ್ಸಿಗಳಿಂದ ಭಾರೀ ಹೊಡೆತ ಬೀಳಲಿದ್ದು, ಲಕ್ಷಾಂತರ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ತುತ್ತಾಗಲಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿ ‘ಮೋದಿಗೊಂದು ಪತ್ರ’ ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಗಂಡಸಿ ಸದಾನಂದ ಸ್ವಾಮಿ, ಸ್ನೇಹಜೀವಿ ಸಂತೋಷ್ ಕುಮಾರ್, ರಘು ಯಾದವ್ ಹಾಗೂ ರಾಜು ಕನ್ನಡಿಗ ಉಪಸ್ಥಿತರಿದ್ದರು.