ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಮೂವರು ಸಾವು, ಇಬ್ಬರಿಗೆ ಗಂಭೀರ ಗಾಯ

ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹಿರೆಹಳ್ಳಿ ಬಳಿ ಇಂದು(ಫೆ.27) ಮುಂಜಾನೆ ನಡೆದಿದೆ.

ಕಾರಲ್ಲಿದ್ದ ಗುಬ್ಬಿ ತಾಲೂಕಿನ ಹೊಸಕೆರೆ ಗ್ರಾಮದ ನರಸಿಂಹ ಮೂರ್ತಿ (38), ಗಂಗಾಧರ್ (35),ಲೋಹಿತ್ (40) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ತುಮಕೂರು ಜಿಲ್ಲೆಯ ಕುಣಿಗಲ್ ಮೂಲದ ಐವರು ಕಾರಲ್ಲಿ ಮಂತ್ರಾಲಯಕ್ಕೆ ತೆರಳಿದ್ದರು. ರಾಯರ ದರ್ಶನ ಮುಗಿಸಿ ಮಂತ್ರಾಲಯದಿಂದ ಕುಣಿಗಲ್‌ಗೆ ಹಿಂದಿರುಗುವ ವೇಳೆ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಕಾರಿನ ಚಾಲಕನ ಅಜಾಗರೂಕತೆ ಹಾಗೂ ಅತಿವೇಗದಿಂದಾಗಿ ಅಪಘಾತ ಸಂಭವಿಸಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಘಟನಾ ಸ್ಥಳಕ್ಕೆ ಚಿತ್ರದುರ್ಗ ಎಸ್ಪಿ ರಂಜಿತ್ ಕುಮಾರ್ ಬಂಡಾರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!