ಬೆಂಗಳೂರು: 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 17ನೇ ಬಜೆಟ್ ಅನ್ನು ಇಂದು(ಮಾ.06) ಬೆಳಗ್ಗೆ 10-15ಕ್ಕೆ ಮಂಡಿಸಲಿದ್ದಾರೆ.

ಗುಜರಾತ್ ಸರ್ಕಾರದ ಮಾಜಿ ಹಣಕಾಸು ಸಚಿವ ವಜುಬಾಯ್ ವಾಲಾ 18 ಬಾರಿ ಬಜೆಟ್ ಮಂಡಿಸಿ ದೇಶದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ವಿತ್ತ ಸಚಿವ ಎಂಬ ದಾಖಲೆ ಹೊಂದಿದ್ದಾರೆ. ಅವರ ನಂತರದ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದಾರೆ. ರಾಜ್ಯದ ಮಟ್ಟಿಗಂತೂ ಸಿದ್ದರಾಮಯ್ಯ ಅತಿ ಹೆಚ್ಚು ಬಜೆಟ್ ಮಂಡಿಸಿದ ಸಿಎಂ ಎಂಬ ದಾಖಲೆ ನಿರ್ಮಿಸಿದ್ದಾರೆ.

2025-26ನೇ ಸಾಲಿನಲ್ಲಿ 51,034 ಕೋಟಿ ರೂ. ಹಂಚಿಕೆ ಮಾಡಲಾಗಿದೆ.16ನೇ ಹಣಕಾಸು ಆಯೋಗ ತನ್ನ ಶಿಫಾರಸಿನಲ್ಲಿ ಕರ್ನಾಟಕದ ತೆರಿಗೆ ಪಾಲಿನ ಹಂಚಿಕೆಯನ್ನು 4.13ಕ್ಕೆ ಹೆಚ್ಚಳ ಮಾಡಿದೆ. 16ನೇ ಹಣಕಾಸು ಆಯೋಗ ಕರ್ನಾಟಕಕ್ಕೆ 63,050 ಕೋಟಿ ರೂ. ತೆರಿಗೆ ಪಾಲನ್ನು ಹಂಚಿಕೆ ಮಾಡಿದೆ. ಈ ಹೆಚ್ಚುವರಿ ತೆರಿಗೆ ಪಾಲಿನಿಂದ ರಾಜ್ಯಕ್ಕೆ ಹೆಚ್ಚಿನ ಅನುದಾನ ಲಭಿಸಲಿದೆ.

ಸೀಮಿತ ಆದಾಯ ಮೂಲಗಳಿಂದ ಪಂಚ ಗ್ಯಾರಂಟಿ ಹೊರೆ ಭರಿಸುವುದು ದೊಡ್ಡ ಕಗ್ಗಂಟಾಗಿ ಪರಿಣಮಿಸುತ್ತಿದೆ. ಹೀಗಾಗಿ ಪಂಚ ಗ್ಯಾರಂಟಿ ಯೋಜನೆಗಳಿಗಾಗಿನ ಅನಗತ್ಯ ವೆಚ್ಚವನ್ನು ಕಡಿತಗೊಳಿಸುವ ಸಾಧ್ಯತೆ ಬಗ್ಗೆ ಆರ್ಥಿಕ ಇಲಾಖೆ ಜೊತೆ ಸಿಎಂ ಗಂಭೀರ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಈ ಬಾರಿಯ ಬಜೆಟ್ ನಲ್ಲಿ ಶಿಕ್ಷಣ, ಉದ್ಯೋಗ, ಆರೋಗ್ಯ, ಕೃಷಿ, ಸಹಕಾರ, ಕೈಗಾರಿಕೆ, ಸಾರಿಗೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಹಿಂದುಳಿದ ವರ್ಗಗಳ ಮೀಸಲಾತಿ ಅನುದಾನ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಭಾರೀ ನಿರೀಕ್ಷೆಗಳಿವೆ.

ಈ ಬಜೆಟ್ ಮಂಡನೆಯ ನೇರಪ್ರಸಾರವನ್ನು ರಾಜ್ಯದ ಆಯ್ದ ಬಸ್ ನಿಲ್ದಾಣದ ಟಿವಿಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಬಜೆಟ್ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಜನತೆಗೆ ತಲುಪಿಸುವ ಉದ್ದೇಶದಿಂದ ವೃತ್ತಿ ಸೊಲ್ಯೂಷನ್ಸ್ ಲಿಮಿಟೆಡ್ ಸಂಸ್ಥೆಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದೊಂದಿಗೆ ರಾಜ್ಯದಾದ್ಯಂತ ಇರುವ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಇರುವ ತನ್ನ ಡಿಜಿಟಲ್ ಡಿಸ್ಪ್ಲೇ (LED) ಪರದೆಗಳ ಮೂಲಕ ನೇರ ಪ್ರಸಾರ ಮಾಡಲು ಮುಂದಾಗಿದೆ.