
ಬೆಂಗಳೂರು: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ಅಂತಾರಾಷ್ಟ್ರೀಯ ವಿಮಾನ ಸಂಚಾರದ ಮೇಲೆ ಕೂಡ ಪರಿಣಾಮ ಬೀರುತ್ತಿದ್ದು, ಇದರ ಪರಿಣಾಮವಾಗಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು(ಮಾ.9) ಕೂಡ ಸಹ ಹಲವು ವಿಮಾನಗಳ ಹಾರಾಟ ರದ್ದುಗೊಂಡಿದೆ. ಅರಬ್ ರಾಷ್ಟ್ರಗಳಿಗೆ ತೆರಳಬೇಕಿದ್ದ ಮತ್ತು ಅಲ್ಲಿಂದ ಆಗಮಿಸಬೇಕಿದ್ದ ಒಟ್ಟು 21 ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ. ಪ್ರಯಾಣಿಕರ ಸುರಕ್ಷತೆ ಹಾಗೂ ವಾಯುಪ್ರದೇಶದ ಅನಿಶ್ಚಿತತೆ ಹಿನ್ನೆಲೆಯಲ್ಲಿ ಏರ್‌ಲೈನ್ ಕಂಪನಿಗಳು ಈ ನಿರ್ಧಾರ ಕೈಗೊಂಡಿವೆ.

ಅಧಿಕೃತ ಮಾಹಿತಿ ಪ್ರಕಾರ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿವಿಧ ಅರಬ್ ರಾಷ್ಟ್ರಗಳಿಗೆ ತೆರಳಬೇಕಿದ್ದ 11 ವಿಮಾನಗಳ ಹಾರಾಟ ರದ್ದಾಗಿದೆ. ಅದೇ ರೀತಿ ವಿದೇಶಗಳಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕಿದ್ದ 10 ವಿಮಾನಗಳೂ ರದ್ದುಗೊಂಡಿವೆ.

ಒಟ್ಟು 21 ವಿಮಾನಗಳ ಹಾರಾಟ ರದ್ದಾದ ಕಾರಣ, ಪ್ರಯಾಣಿಕರಿಗೆ ಸಾಕಷ್ಟು ತೊಂದರೆ ಉಂಟಾಗಿದೆ. ವಿಮಾನ ರದ್ದಾದ ಬಗ್ಗೆ ಸಂಬಂಧಿತ ಏರ್‌ಲೈನ್ ಸಂಸ್ಥೆಗಳು ಪ್ರಯಾಣಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿರುವುದಾಗಿ ತಿಳಿದುಬಂದಿದೆ. ಇರಾನ್–ಇಸ್ರೇಲ್ ನಡುವಿನ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿರುವುದರಿಂದ ಮುಂದಿನ ದಿನಗಳಲ್ಲಿಯೂ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಮಧ್ಯಪ್ರಾಚ್ಯ ದೇಶಗಳತ್ತ ಪ್ರಯಾಣಿಸುವವರು ತಮ್ಮ ವಿಮಾನಗಳ ಸ್ಥಿತಿಯನ್ನು ಮುಂಚಿತವಾಗಿ ಪರಿಶೀಲಿಸಿಕೊಳ್ಳುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.
