ಉಡುಪಿಯ ಇಬ್ಬರು ರೌಡಿಶೀಟರ್‌ಗಳ ಸಹಿತ ಮೂವರನ್ನು ಗಡಿ ದಾಟಿಸಿದ ಪೊಲೀಸರು

ಉಡುಪಿ: ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ಪೊಲೀಸರು ಭಾರಿ ಕಾರ್ಯಾಚರಣೆ ನಡೆಸಿದ್ದಾರೆ. ಸಮಾಜಘಾತುಕ ಚಟುವಟಿಕೆಗಳಲ್ಲಿ ತೊಡಗಿದ್ದ ಇಬ್ಬರು ರೌಡಿಶೀಟರ್‌ಗಳು ಸೇರಿದಂತೆ ಒಟ್ಟು ಮೂವರು ಆರೋಪಿಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ವಿಶೇಷ ಕಾರ್ಯಾಂಗ ದಂಡಾಧಿಕಾರಿಯೂ ಆಗಿರುವ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಮಾ.12ರಂದು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಬೊಮ್ಮರಬೆಟ್ಟು ಗ್ರಾಮದ ಪುತ್ತಿಗೆ ನಿವಾಸಿ ಸಂದೇಶ ನಾಯ್ಕ್, ಹಿರಿಯಡಕ ಪಾಪುಜೆ ದರ್ಖಾಸು ನಿವಾಸಿ ಸುಶಾಂತ್ ಪೂಜಾರಿ ಹಾಗೂ ಪಡುಬಿದ್ರಿ ಪೊಲೀಸ್ ಠಾಣೆಯ ವ್ಯಾಪ್ತಿಯ ನಡ್ಸಾಲು ಗ್ರಾಮದ ಜಬ್ಬಾರ್ ಹುಸೇನ್ ಗಡಿಪಾರುಗೊಂಡ ಆರೋಪಿಗಳು.

ಗಡಿಪಾರುಗೊಂಡವರಲ್ಲಿ ಪ್ರಮುಖನಾದ ಪಡುಬಿದ್ರಿ ಠಾಣಾ ವ್ಯಾಪ್ತಿಯ ರೌಡಿಶೀಟರ್ ಜಬ್ಬಾರ್ ಹುಸೇನ್ ವಿರುದ್ಧ ಉಡುಪಿ, ಮಂಗಳೂರು ನಗರ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಟ್ಟು 16 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಈತನನ್ನು ಹಾಸನ ಜಿಲ್ಲೆಯ ಪೆನ್ಷನ್ ಮೊಹಲ್ಲಾ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.

ಅದೇ ರೀತಿ, ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಸಂದೇಶ್ ನಾಯ್ಕ್ ವಿರುದ್ಧ 5 ಪ್ರಕರಣಗಳಿದ್ದು, ಈತನನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಗೆ ಹಾಗೂ ಮೂರು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹಿರಿಯಡ್ಕದ ಸುಶಾಂತ್ ಪೂಜಾರಿ ಎಂಬಾತನನ್ನು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.

ಪೊಲೀಸ್ ಅಧೀಕ್ಷಕರ ಖಡಕ್ ಎಚ್ಚರಿಕೆ:
ಜಿಲ್ಲೆಯಲ್ಲಿ ಸಾರ್ವಜನಿಕರ ನೆಮ್ಮದಿಗೆ ಭಂಗ ತರುವ ಮತ್ತು ಕಾನೂನು ಕೈಗೆತ್ತಿಕೊಳ್ಳುವ ವ್ಯಕ್ತಿಗಳ ವಿರುದ್ಧ ಇಂತಹ ಕಠಿಣ ಕ್ರಮಗಳು ಮುಂದುವರಿಯಲಿವೆ ಎಂದು ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ. ಅಪರಾಧ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿರುವವರ ಮೇಲೆ ನಿಗಾ ಇರಿಸಲಾಗಿದ್ದು, ಜಿಲ್ಲೆಯ ಸುರಕ್ಷತೆಯ ದೃಷ್ಟಿಯಿಂದ ಈ ಗಡಿಪಾರು ಆದೇಶ ಜಾರಿಗೊಳಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

error: Content is protected !!