ಇಂದಿನಿಂದ ಎಸೆಸೆಲ್ಸಿ ಪರೀಕ್ಷೆ; ದ.ಕ.ದಲ್ಲಿ 29,397, ಉಡುಪಿಯಲ್ಲಿ 14,151 ಮಂದಿ ನೋಂದಣಿ

ಮಂಗಳೂರು: ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭಗೊಳ್ಳಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಸಿದ್ಧತೆಗಳು ನಡೆದಿವೆ. ಹಾಗೆಯೇ ರಾಜ್ಯಾದ್ಯಂತ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ದ.ಕ. ಜಿಲ್ಲೆಯಲ್ಲಿ ಈ ಬಾರಿ 29,397 ಮಂದಿ ವಿದ್ಯಾರ್ಥಿಗಳು ಹಾಗೂ ಉಡುಪಿಯಲ್ಲಿ 14,151 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ.

ಇಂದಿನಿಂದ ಎ. 2ರ ವರೆಗೆ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆ ಪ್ರಕ್ರಿಯೆಯ ವೆಬ್‌ ಕಾಸ್ಟಿಂಗ್‌ ವೀಕ್ಷಣೆ ನಡೆಯಲಿದೆ. ದ.ಕ ಜಿಲ್ಲೆಯ 91 ಪರೀಕ್ಷಾ ಕೇಂದ್ರಗಳಲ್ಲಿ 524 ಪ್ರೌಢಶಾಲೆಗಳ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳ ಪ್ರತೀ ಕೊಠಡಿಯಲ್ಲಿ 24 ಅಭ್ಯರ್ಥಿಗಳಿಗೆ ಆಸನ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, 1,298 ಕೊಠಡಿಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. 2,428 ಅಧಿಕಾರಿ, ಸಿಬಂದಿ ನಿಯೋಜಿಸಲಾಗಿದೆ.

ಈ ಬಾರಿ ಪದುವಾ ಕೇಂದ್ರದಲ್ಲಿ ಓರ್ವ ವಿಶೇಷ ವಿದ್ಯಾರ್ಥಿ ನೆಲದ ಮೇಲೆ ಕುಳಿತು ಪರೀಕ್ಷೆ ಬರೆಯಲಿದ್ದಾರೆ. ಪಾಲಕರ ಮನವಿಯಂತೆ ಈ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಡಿಡಿಪಿಐ ಶಶಿಧರ್‌ ತಿಳಿಸಿದ್ದಾರೆ.

ಪರೀಕ್ಷೆ ಕೇಂದ್ರದ ಅಧೀಕ್ಷಕರು, ಮೇಲ್ವಿಚಾರಕರು, ಸ್ಥಾನಿಕ ಜಾಗೃತಿ ದಳದ ಅಧಿಕಾರಿಗಳು, ಮೊಬೈಲ್‌ ಸ್ವಾಧೀನ ಅಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ವಿಚಕ್ಷಣಾ ದಳ, ಪರೀಕ್ಷಾ ನೋಡೆಲ್‌ ಅಧಿಕಾರಿಗಳ ನಿಯೋಜನೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಮೊಬೈಲ್‌, ಸ್ಮಾರ್ಟ್‌ ವಾಚ್‌ಗಳನ್ನು ತರುವುದನ್ನು ನಿಷೇಧಿಸಲಾದೆ.

ಗ್ರಾಮೀಣ ಪ್ರದೇಶದಿಂದ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ವಿದ್ಯಾರ್ಥಿಗಳು ಸಹಿತ ಎಲ್ಲ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಮೂಲಕ ಪರೀಕ್ಷ ಕೇಂದ್ರಕ್ಕೆ ಹೋಗಿ ಬರಲು ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರವೇಶ ಪತ್ರ ತೋರಿಸಿ ಪ್ರಯಾಣ ಮಾಡಬಹುದಾಗಿದೆ. ಪರೀಕ್ಷಾ ಕೇಂದ್ರದ ಬಳಿಯೇ ಬಸ್‌ ನಿಲುಗಡೆಗೆ ಸೂಚನೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

error: Content is protected !!