ಉಡುಪಿ: ನಗರದ ಕ್ರಿಶ್ಚಿಯನ್ ಪಿಯು ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ʻಸಮಾಧಾನ ಮಹೋತ್ಸವ’ ಧಾರ್ಮಿಕ ಕಾರ್ಯಕ್ರಮವು ತೀವ್ರ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ಸೌಹಾರ್ದತೆಯ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದ ವಿರುದ್ಧ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ 38 ಮಂದಿಯನ್ನು ಬಂಧಿಸಿದ್ದಾರೆ.

ಫೆಲೋಶಿಪ್ ಆಫ್ ಉಡುಪಿ ಡಿಸ್ಟ್ರಿಕ್ಟ್ ಚರ್ಚಸ್ ವತಿಯಿಂದ ಹಮ್ಮಿಕೊಳ್ಳಲಾದ ಈ ಕಾರ್ಯಕ್ರಮಕ್ಕೆ ವಿವಾದಿತ ಕ್ರೈಸ್ತ ಪ್ರಚಾರಕ ಮೋಹನ್ ಸಿ. ಲಾಜರಸ್ ಅವರನ್ನು ಆಹ್ವಾನಿಸಿರುವುದು ಸಂಘರ್ಷಕ್ಕೆ ಮೂಲ ಕಾರಣವಾಯಿತು. ಲಾಜರಸ್ ಅವರ ಭೇಟಿಯನ್ನು ತೀವ್ರವಾಗಿ ವಿರೋಧಿಸಿದ ಹಿಂದೂ ಜಾಗರಣಾ ವೇದಿಕೆ, ಇದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದು ಆರೋಪಿಸಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಆಯೋಜಕರು ಮುನ್ನೆಚ್ಚರಿಕಾ ಕ್ರಮವಾಗಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಕಾರ್ಯಕ್ರಮಕ್ಕೆ ಸೂಕ್ತ ರಕ್ಷಣೆ ನೀಡುವಂತೆ ನ್ಯಾಯಾಲಯವು ಪೊಲೀಸರಿಗೆ ಆದೇಶ ನೀಡಿತ್ತು.

ಹೈಕೋರ್ಟ್ ಆದೇಶದಂತೆ ಕಾರ್ಯಕ್ರಮದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಆದರೆ, ಪೊಲೀಸರ ಎಚ್ಚರಿಕೆಯ ನಡುವೆಯೂ ಹಿಂದೂ ಜಾಗರಣಾ ವೇದಿಕೆಯ ಮುಖಂಡ ಶ್ರೀಕಾಂತ ಶೆಟ್ಟಿ ನೇತೃತ್ವದಲ್ಲಿ 38ಕ್ಕೂ ಹೆಚ್ಚು ಕಾರ್ಯಕರ್ತರು ಗೋವಿಂದ ಕಲ್ಯಾಣ ಮಂಟಪದ ಬಳಿ ಅಕ್ರಮ ಕೂಟ ಸೇರಿಕೊಂಡಿದ್ದರು. ಅಲ್ಲಿಂದ ಕಾರ್ಯಕ್ರಮ ನಡೆಯುವ ಮೈದಾನದತ್ತ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆಯ ಮೂಲಕ ನುಗ್ಗಲು ಯತ್ನಿಸಿದರು.

ಪೊಲೀಸರ ತಡೆಯಾಜ್ಞೆಯನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ, ಸ್ಥಳದಲ್ಲಿದ್ದ ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಪ್ರಮುಖವಾಗಿ ಮಹೇಶ್ ಶೆಣೈ, ಶ್ರೀಕಾಂತ್ ಶೆಟ್ಟಿ, ಸಂತೋಷ್, ಉಮೇಶ್ ನಾಯ್ಕ್ ಸೇರಿದಂತೆ ಒಟ್ಟು 38 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಅಕ್ರಮ ಕೂಟ ರಚನೆ ಮತ್ತು ಶಾಂತಿ ಭಂಗದ ಆರೋಪದಡಿ ಸ್ವಯಂ ಪ್ರೇರಿತ (Suo Motu) ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಪ್ರತಿಭಟನೆಯ ಹಿನ್ನೆಲೆಯಲ್ಲಿ ಉಡುಪಿ ನಗರದಾದ್ಯಂತ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಸಾರ್ವಜನಿಕ ಶಾಂತಿಗೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ. ಸದ್ಯ ಕಾರ್ಯಕ್ರಮವು ಪೊಲೀಸ್ ಕಾವಲಿನಲ್ಲಿ ನಡೆಯುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಲಾಗಿದೆ.
