ಬೆಂಗಳೂರು: ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಮೂಡುಬಿದಿರೆ ಪೊಲೀಸ್ ಇನ್‌ಸ್ಪೆಕ್ಟರ್ ವಿರುದ್ಧದ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ಇಲಾಖೆಗೆ (CID) ವಹಿಸಲಾಗಿದೆ. ಈ ಕುರಿತು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (DGP) ಅಗತ್ಯ ಸೂಚನೆ ನೀಡಿರುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸೋಮವಾರ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, “ಮೂಡುಬಿದಿರೆ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಈಗಾಗಲೇ ಸಂತ್ರಸ್ತ ಮಹಿಳೆಯನ್ನು ಭೇಟಿ ಮಾಡಿ ಮಾಹಿತಿ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಗಂಭೀರ ವಿಚಾರಗಳನ್ನು ಅವರು ನನ್ನ ಗಮನಕ್ಕೆ ತಂದಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ನಿಷ್ಪಕ್ಷಪಾತ ತನಿಖೆಯ ಅಗತ್ಯವಿದ್ದು, ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲಾಗಿದೆ,” ಎಂದರು.

ಪೊಲೀಸ್ ಇನ್‌ಸ್ಪೆಕ್ಟರ್ ಮೇಲೆ ದೌರ್ಜನ್ಯದ ಆರೋಪ ಕೇಳಿಬಂದ ತಕ್ಷಣವೇ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಶಿಸ್ತುಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ಇಲಾಖಾ ವರದಿ ನೀಡುವಂತೆ ಈಗಾಗಲೇ ಸೂಚನೆ ನೀಡಲಾಗಿದ್ದು, ಅಧಿಕಾರಿಗಳು ಶೀಘ್ರದಲ್ಲೇ ವರದಿ ಸಲ್ಲಿಸಲಿದ್ದಾರೆ ಎಂದು ಸಚಿವರು ವಿವರಿಸಿದರು.

“ಈ ಪ್ರಕರಣದಲ್ಲಿ ಇನ್ನು ಎಷ್ಟು ಜನ ಸಂತ್ರಸ್ತರಿದ್ದಾರೆ ಮತ್ತು ಘಟನೆಯ ಹಿಂದಿನ ಸತ್ಯಾಸತ್ಯತೆ ಏನು ಎಂಬುದು ಸಿಐಡಿ ತನಿಖೆಯ ನಂತರ ಸ್ಪಷ್ಟವಾಗಲಿದೆ. ಮಹಿಳೆಯರ ಸುರಕ್ಷತೆಯ ವಿಷಯದಲ್ಲಿ ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ,” ಎಂದು ಅವರು ಪುನರುಚ್ಚರಿಸಿದರು.
