ದೇಶದಲ್ಲಿ ಲಾಕ್‌ಡೌನ್ ಭೀತಿ ಇಲ್ಲ: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ

ನವದೆಹಲಿ: ದೇಶಾದ್ಯಂತ ಮತ್ತೆ ಲಾಕ್‌ಡೌನ್ ಜಾರಿಯಾಗಲಿದೆ ಎಂಬ ವದಂತಿಗಳನ್ನು ಕೇಂದ್ರ ಸರ್ಕಾರ ಸ್ಪಷ್ಟವಾಗಿ ನಿರಾಕರಿಸಿದೆ. ಭಾರತದಲ್ಲಿ ಲಾಕ್‌ಡೌನ್ ಹೇರುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟಪಡಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಲಾಕ್‌ಡೌನ್ ಸುದ್ದಿಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದವು. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಸರ್ಕಾರ, ಜನರಲ್ಲಿ ಮೂಡಿರುವ ಗೊಂದಲವನ್ನು ಪರಿಹರಿಸಲು ಮುಂದಾಗಿದೆ.

ತಮ್ಮ ‘ಎಕ್ಸ್’ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡ ಕೇಂದ್ರ ಸಚಿವರು, “ಜಾಗತಿಕ ಮಟ್ಟದಲ್ಲಿ ಇಂಧನ ಮತ್ತು ಪೂರೈಕೆ ಸರಪಳಿಯಲ್ಲಿ ಏರುಪೇರಾಗುತ್ತಿರುವುದನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಇಂಧನ ಮತ್ತು ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಲಾಕ್‌ಡೌನ್ ವದಂತಿಗಳು ಸಂಪೂರ್ಣ ಸುಳ್ಳು. ಇಂತಹ ಸಮಯದಲ್ಲಿ ಸಾರ್ವಜನಿಕರು ಶಾಂತವಾಗಿರಬೇಕು ಮತ್ತು ಜವಾಬ್ದಾರಿಯುತವಾಗಿ ವರ್ತಿಸಬೇಕು. ಸುಳ್ಳು ಸುದ್ದಿಗಳನ್ನು ಹರಡಿ ಸಾರ್ವಜನಿಕರಲ್ಲಿ ಆತಂಕ ಮೂಡಿಸುವುದು ಬೇಜವಾಬ್ದಾರಿತನದ ಪರಮಾವಧಿ ಎಂದು ಅವರು ಕಿಡಿಕಾರಿದ್ದಾರೆ.

error: Content is protected !!