ಉಳ್ಳಾಲ: ಬಾವಿ ಕೊರೆಯುವ ಕಾಮಗಾರಿ ನಡೆಸುತ್ತಿದ್ದ ವೇಳೆ ಕ್ರೇನ್‌ನಿಂದ ಮಣ್ಣು ತುಂಬಿದ್ದ ಕಬ್ಬಿಣದ ಬಕೆಟ್ ಕಾರ್ಮಿಕನ ತಲೆಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಕುತ್ತಾರು ಪದವಿನ ಸಲಾತ್ ನಗರದಲ್ಲಿ ಶುಕ್ರವಾರ(ಮಾ.27) ಸಂಜೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಮಲ್ಲಾಪುರ ನಿವಾಸಿ ಶಿವಕುಮಾರ ಜಿ.ಕೆ (30) ಮೃತ ವ್ಯಕ್ತಿ.
ಉಳ್ಳಾಲ ತಾಲೂಕಿನ ಕುತ್ತಾರುವಿನ ಸಲಾತ್ ನಗರದಲ್ಲಿ ಹೊಸ ಬಾವಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಶಿವಕುಮಾರ್ ಸೇರಿ ಮೂವರು ಕಾರ್ಮಿಕರು ಮೂವತ್ತು ಅಡಿ ಆಳ ಕೊರೆಯಲಾದ ಬಾವಿಯೊಳಗಡೆ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ಒಟ್ಟು ಆರು ಜನ ಕೂಲಿ ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದರು.

ಈ ವೇಳೆ ಕ್ರೇನ್ ಮೂಲಕ ಕಬ್ಬಿಣದ ಬಕೆಟ್‌ನಲ್ಲಿ ಮಣ್ಣು ಮೇಲಕ್ಕೆತ್ತುತ್ತಿದ್ದ ಸಂದರ್ಭದಲ್ಲಿ ಕ್ರೇನ್‌ನ ಕೊಕ್ಕೆಯಿಂದ ಬೇರ್ಪಟ್ಟ ಮಣ್ಣು ತುಂಬಿದ ಬಕೆಟ್ ಶಿವಕುಮಾರ್ ಅವರ ತಲೆ ಮೇಲೆ ಬಿದ್ದಿದೆ ಎಂದು ತಿಳಿದು ಬಂದಿದೆ. ಗಂಭೀರ ಗಾಯಗೊಂಡಿದ್ದ ಶಿವಕುಮಾರ್ ಅವರನ್ನು ಮೇಲಕ್ಕೆತ್ತಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ದಾರಿ ಮಧ್ಯೆ ಅವರು ಮೃತಪಟ್ಟಿರುವುದಾಗಿ ವೈಧ್ಯರು ತಿಳಿಸಿದ್ದಾರೆ.

ಬಾವಿಯೊಳಗಿದ್ದ ಇತರ ಇಬ್ಬರು ಕಾರ್ಮಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
