ಕಾರು ಡಿಕ್ಕಿ: ಬೈಕ್‌ ಸವಾರನಿಗೆ ಗಾಯ

ಕೊಳ್ಳೇಗಾಲ: ಕಾರಿನ ಟೈಯರ್ ಸಿಡಿದು ನಿಯಂತ್ರಣ ತಪ್ಪಿದ ಕಾರು ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತಂಬಳ್ಳಿಯ ಮುಖ್ಯರಸ್ತೆಯಲ್ಲಿ ನಡೆದಿದೆ.

ತಾಲ್ಲೂಕಿನ ಹಳೆ ಹಂಪಾಪುರದ ನಿವಾಸಿ ಶಾಂತರಾಜು ಗಾಯಾಳು.

ಚಾಮರಾಜನಗರ ಜಿಲ್ಲಾ ನಿರ್ಮಿತಿ ಕೇಂದ್ರದಲ್ಲಿ ಸೈಟ್ ಅಸಿಸ್ಟೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಶಾಂತರಾಜು ಎಂದಿನಂತೆ ತಾಲ್ಲೂಕಿನ ಆಲಹಳ್ಳಿಲ್ಲಿ ನಡೆಯುತ್ತಿರುವ ಕಾಮಗಾರಿ ವೀಕ್ಷಣೆ ಮಾಡಿಕೊಂಡು ಮಧ್ಯಾಹ್ನ ಬೈಕ್‌ನಲ್ಲಿ ಬರುತ್ತಿದ್ದರು. ಈ ವೇಳೆ ಉತ್ತಂಬಳ್ಳಿಯ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಂಬದಿಯಿಂದ ಬರುತ್ತಿದ್ದ ಕಾರಿನ ಟೈಯರ್ ಸಿಡಿದು ನಿಯಂತ್ರಣ ತಪ್ಪಿ ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ನಜ್ಜುಗುಜ್ಜಾಗಿದೆ.

ಈ ಸಂದರ್ಭ ಬೈಕ್ ಸವಾರ ಶಾಂತರಾಜು ಗಂಭೀರವಾಗಿ ಗಾಯವಾಗಿ ಕುಸಿದು ಬಿದ್ದಿದ್ದು, ಸ್ಥಳೀಯರು ಕೂಡಲೇ ಆಂಬುಲೆನ್ಸ್ ಮೂಲಕ ನಗರದ ಸರ್ಕಾರಿ ಉಪವಿಭಾಗ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದ್ದಾರೆ.

ಅಗರ ಮಾಂಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!