ಸುಳ್ಯ: ಸಂಪಾಜೆ ಗೂನಡ್ಕದಲ್ಲಿರುವ ಮಸೀದಿಯ ಕಾಣಿಕೆ ಡಬ್ಬಿಯನ್ನು ಕಳವು ಮಾಡಿದ್ದ ಪ್ರಕರಣವನ್ನು ಸುಳ್ಯ ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಆತನಿಂದ ಕಳವು ಮಾಡಿದ್ದ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತನನ್ನು ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ನಿವಾಸಿ ಮೊಹಮ್ಮದ್ ಸಲ್ಮಾನ್ (35) ಎಂದು ಗುರುತಿಸಲಾಗಿದೆ.
ಕಳೆದ ಮಾರ್ಚ್ 30ರಂದು ಗೂನಡ್ಕ ಮಸೀದಿಯ ಆವರಣದಲ್ಲಿದ್ದ ಕಾಣಿಕೆ ಡಬ್ಬಿಯನ್ನು ಯಾರೋ ಕಳ್ಳರು ಒಡೆದು ನಗದು ಕಳವು ಮಾಡಿದ್ದರು. ಈ ಬಗ್ಗೆ ಮಸೀದಿಯ ಆಡಳಿತ ಮಂಡಳಿಯು ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿತ್ತು. ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು. ಸೋಮವಾರ (ಏಪ್ರಿಲ್ 06) ಸುಳ್ಯದ ಕೆಮ್ರಾಜೆ ಎಲಿಮಲೆ ಎಂಬಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನದ ಪ್ರಕರಣ ಬೆಳಕಿಗೆ ಬಂದಿದೆ.

ಆರೋಪಿಯಿಂದ ಕಳ್ಳತನ ಮಾಡಿದ್ದ 2,000 ರೂಪಾಯಿ ನಗದು ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.