ನಿಲಾಂಬಜಾರ್ (ಅಸ್ಸಾಂ): ಪ್ರಾರ್ಥನೆಯ ಸಮಯದಲ್ಲೂ ಕಾಣಿಸಿಕೊಳ್ಳುವ ವಿಷಕಾರಿ ಹಾವನ್ನು ಕೊಲ್ಲಬೇಕು ಎಂದು ಕುರಾನ್ ಹೇಳುತ್ತದೆ. ಆರ್‌ಎಸ್‌ಎಸ್ ಮತ್ತು ಬಿಜೆಪಿ ಅದೇ ರೀತಿಯ ಹಾವುಗಳಾಗಿವೆ; ಅವುಗಳನ್ನು ಕೊಲ್ಲದಿದ್ದರೆ ನೀವು ಬದುಕಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸಭೆಯನ್ನುದ್ದೇಶಿಸಿ ಮಾತನಾಡಿದ ಖರ್ಗೆ ಅವರು ಪವಿತ್ರ ಗ್ರಂಥವೊಂದನ್ನು ಉಲ್ಲೇಖಿಸಿ, “ಕುರಾನ್‌ನಲ್ಲಿ ನಮಾಜ್ ಮಾಡುವಾಗಲೂ ವಿಷಕಾರಿ ಹಾವನ್ನು ಕಂಡರೆ ಅದನ್ನು ಕೊಲ್ಲಬೇಕು ಎಂದು ಹೇಳಲಾಗಿದೆ. ಆರ್‌ಎಸ್‌ಎಸ್ ಮತ್ತು ಬಿಜೆಪಿ ಕೂಡ ಅದೇ ರೀತಿಯ ವಿಷಕಾರಿ ಹಾವುಗಳು. ನೀವು ಅವುಗಳನ್ನು ಕೊಲ್ಲದಿದ್ದರೆ ನೀವು ಬದುಕಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ. ಈ ಹೇಳಿಕೆಯು ರಾಜಕೀಯ ವಿರೋಧಿಗಳ ವಿರುದ್ಧ ಬಹಿರಂಗವಾಗಿ ಹಲ್ಲೆ ಅಥವಾ ಹಿಂಸೆಗೆ ಪ್ರಚೋದನೆ ನೀಡುವಂತಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಖರ್ಗೆ ಅವರ ಈ ಹೇಳಿಕೆಗೆ ಬಿಜೆಪಿ ತೀವ್ರವಾಗಿ ಪ್ರತಿಕ್ರಿಯಿಸಿದೆ. ಪಕ್ಷದ ವಕ್ತಾರ ಶೆಹಜಾದ್ ಪೂನಾವಾಲಾ ಅವರು ಸಾಮಾಜಿಕ ಜಾಲತಾಣ ʻX’ ನಲ್ಲಿ ಪೋಸ್ಟ್ ಮಾಡಿದ್ದು, “ಕಾಂಗ್ರೆಸ್ ಈಗ ಅತ್ಯಂತ ಕೆಳಮಟ್ಟಕ್ಕೆ ಇಳಿದಿದೆ. ಇದು ರಾಜಕೀಯ ವಿರೋಧಿಗಳ ವಿರುದ್ಧ ಮುಸ್ಲಿಮರನ್ನು ಪ್ರಚೋದಿಸುವ ತಂತ್ರ” ಎಂದು ಕಿಡಿಕಾರಿದ್ದಾರೆ. ಅಷ್ಟೇ ಅಲ್ಲದೆ, ಕಾಂಗ್ರೆಸ್ ವರ್ತನೆಯನ್ನು “ಇಂಡಿಯನ್ ಜಿಹಾದಿ ಕಾಂಗ್ರೆಸ್” ಗೆ ಹೋಲಿಸಿರುವ ಅವರು, ಇದು ತುರ್ತು ಪರಿಸ್ಥಿತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ಟೀಕಿಸಿದ್ದಾರೆ.
ಖರ್ಗೆ ಅವರ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಟ್ರೋಲ್ ಆಗುತ್ತಿದ್ದು, ನೆಟ್ಟಿಗರು ಮತ್ತು ಬಿಜೆಪಿ ಕಾರ್ಯಕರ್ತರು ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿಯೊಬ್ಬರು ಇಂತಹ ಪ್ರಚೋದನಾಕಾರಿ ಮಾತುಗಳನ್ನು ಆಡಿರುವುದು ಅಪಾಯಕಾರಿ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಈ ವಿಚಾರದಲ್ಲಿ ಚುನಾವಣಾ ಆಯೋಗವು ತಕ್ಷಣವೇ ಮಧ್ಯಪ್ರವೇಶಿಸಿ, ಖರ್ಗೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಆಗ್ರಹಿಸಿದೆ.