ಬೆಂಗಳೂರು: ರಾಜ್ಯದಲ್ಲಿ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ಅನುಮೋದಿತ ಚಾರಣ ಪಥಗಳಲ್ಲಿ ಇನ್ನು ಮುಂದೆ ನೇಚರ್ ಗೈಡ್ ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ಚಾರಣಿಗರ ಸುರಕ್ಷತೆಗಾಗಿ ರೂಪಿಸಲಾಗಿರುವ ಪ್ರಮಾಣಿತ ಕಾರ್ಯಾಚರಣೆ ವಿಧಾನ(ಎಸ್.ಓ.ಪಿ.) ಬಿಡುಗಡೆ ಮಾಡಿ ಮಾತನಾಡಿದ ಅವರು, ಪ್ರತಿ 10 ಚಾರಣಿಗರಿಗೆ ಒಬ್ಬರು ಸ್ಥಳೀಯ ಪ್ರಕೃತಿ ಮಾರ್ಗದರ್ಶಕರಿರುತ್ತಾರೆ. ಎಲ್ಲ ಚಾರಣ ಪಥಗಳಲ್ಲಿ ಒಮ್ಮೆಗೆ ಗರಿಷ್ಠ 150 ಜನರಿಗೆ ಮಾತ್ರ ಸೀಮಿತಗೊಳಿಸಲಾಗುವುದು ಎಂದರು.
ಚಾರಣಕ್ಕೆ ಬರುವವರು ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯ. ಒಬ್ಬರೇ ಚಾರಣಿಗರು ನೋಂದಾಯಿಸಿದ್ದರೂ ಗೈಡ್ ಸೌಲಭ್ಯ ಕಲ್ಪಿಸಲಾಗುವುದು, ಗೈಡ್ ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲ ಎಂದರು.

ಇನ್ನು ಮುಂದೆ ಪ್ರತಿಯೊಂದು ಚಾರಣಪಥದಲ್ಲೂ ನೇಚರ್ ಗೈಡ್‌ಗಳಿಗೆ ಜಿ.ಪಿ.ಎಸ್. ಅಳವಡಿಸಿದ ವಾಕಿಟಾಕಿಯನ್ನು ಕಡ್ಡಾಯವಾಗಿ ನೀಡಲಾಗುವುದು. ಅದೇ ರೀತಿ ಪ್ರತಿಯೊಬ್ಬ ಚಾರಣಿಗರ ಮೊಬೈಲ್‌ಗೆ ಚಾರಣಪಥದ ನಕ್ಷೆ ಸಹಿತ ಆ್ಯಪ್ ಅನ್ನು ಅಳವಡಿಸಲಾಗುವುದು. ಅಕಸ್ಮಾತ್ ಯಾರೇ ಚಾರಣಿಗರು ದಾರಿ ತಪ್ಪಿದರೂ ಅವರ ಶೋಧಕ್ಕೆ ಈ ಆ್ಯಪ್ ಸಹಕಾರಿಯಾಗಲಿದೆ ಎಂದರು.
ಚಾರಣ ಆರಂಭಕ್ಕೂ ಮುನ್ನ ಮೂಲ ನೆಲೆಯಲ್ಲಿ ಚಾರಣಿಗರಿಗೆ ಸಂಕ್ಷಿಪ್ತವಾಗಿ ಚಾರಣದ ದೂರ, ಅವಧಿ ಮತ್ತು ಅಲ್ಲಿನ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಲಾಗುವುದು. ಅದೇ ರೀತಿ ವನ್ಯಜೀವಿಗಳು ಎದುರಾದರೆ ಏನು ಮಾಡಬೇಕು ಎಂದೂ ತಿಳಿಸಲಾಗುವುದು. ಹೆಚ್ಚು ಶಬ್ದ ಮಾಡುವ ಯಾವುದೇ ಸಾಧನಗಳಿಗೆ, ಹರಿತವಾದ ಲೋಹದ ವಸ್ತು, ಆಯುಧಗಳನ್ನು ತೆಗೆದುಕೊಂಡು ಹೋಗಲು ಮತ್ತು ಕ್ಯಾಂಪ್ ಫೈರ್ ಮಾಡಲು ಚಾರಣ ಪಥದಲ್ಲಿ ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಚಾರಣಿಗರಿಗೆ ಮೂಲ ನೆಲೆಯಲ್ಲಿ ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು. ಚಾರಣ ಪಥದಲ್ಲಿ ಬೇಸ್ ಕ್ಯಾಂಪ್ ಗೆ ಹೋಗುವ ಮಾರ್ಗಸೂಚಿ, ಬಾಣದಾಕಾರದ ಗುರುತು ಹಾಕಲಾಗುವುದು. ಮಾರ್ಗಮಧ್ಯೆ ವಿರಮಿಸಿಕೊಳ್ಳಲು ವಿಶ್ರಾಂತಿ ತಾಣ ಮಾಡಲಾಗುವುದು ಎಂದರು.
ಇನ್ನು ಮುಂದೆ ಗೈಡ್‌ಗಳು ಯಾವುದೇ ಚಾರಣಿಗ ತಮಗಿಂತ ಮುಂದೆ ಹೋಗಿಲ್ಲ ಹಾಗೂ ಹಿಂದೆ ಉಳಿದಿಲ್ಲ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಬೇಕು. ಬೇಸ್ ಕ್ಯಾಂಪ್, ವಿಶ್ರಾಂತಿ ತಾಣಗಳಲ್ಲಿ ಕಡ್ಡಾಯವಾಗಿ ಚಾರಣಿಗರ ಎಣಿಕೆ ಮಾಡಬೇಕು. ಪ್ರತಿ ಅರ್ಧಗಂಟೆಗೊಮೆ ತಮ ವಾಕಿಟಾಕಿ ಮೂಲಕ ಬೇಸ್ ಕ್ಯಾಂಪ್‌ನೊಂದಿಗೆ ಸಂವಹನ ನಡೆಸಬೇಕು. ಚಾರಣಿಗರ ಜವಾಬ್ದಾರಿ ಹೊರುವಂತೆ ಅವರಿಗೆ ಹೊಣೆಗಾರಿಕೆ ನೀಡಲಾಗುವುದು. ಚಾರಣ ಆರಂಭವಾದ ಒಂದು ಗಂಟೆಯೊಳಗೆ ವಾಕಿಟಾಕಿ ಸಂವಹನ ಗೈಡ್ ಕಡೆಯಿಂದ ನಡೆಯದಿದ್ದರೆ ಬೇಸ್ ಕ್ಯಾಂಪ್ ಸಿಬ್ಬಂದಿಯೇ ಕರೆ ಮಾಡಿ ಖಚಿತಪಡಿಸಿಕೊಳ್ಳುತ್ತಾರೆ ಎಂದರು.
ಅಪ್ರಾಪ್ತ ವಯಸ್ಕರು ಚಾರಣಕ್ಕೆ ತೆರಳಲು ಅವರ ಪಾಲಕರ, ಪೋಷಕರ ಅನುಮತಿ ಪತ್ರ ಕಡ್ಡಾಯ. ಅದೇ ರೀತಿ ಹಿರಿಯ ನಾಗರಿಕರು ಚಾರಣ ಕೈಗೊಳ್ಳಲು ತಮ ದೈಹಿಕ ಸಾಮರ್ಥ್ಯ ಮತ್ತು ಸದೃಢತೆಯ ಪ್ರಮಾಣ ಪತ್ರ ಒದಗಿಸಬೇಕಾಗುತ್ತದೆ ಎಂದಿದ್ದಾರೆ.