ವಾಮಂಜೂರು: ಎಕ್ಸ್‌ಪ್ರೆಸ್-‌ ರಿಕ್ಷಾ ನಡುವೆ ಅಪಘಾತ-ಹಲವರಿಗೆ ಗಾಯ


ಮಂಗಳೂರು: ಮಂಗಳೂರು: ನಗರದ ಹೊರವಲಯದ ವಾಮಂಜೂರು ಸಮೀಪದ ಕೆತ್ತಿಕಲ್‌ನಲ್ಲಿ ಇಂದು ಎಕ್ಸ್‌ಪ್ರೆಸ್‌ ಬಸ್‌ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ  ಹಲವರು ಗಾಯಗೊಂಡಿದ್ದಾರೆ.

ಮಂಗಳೂರಿನಿಂದ ಮೂಡಬಿದ್ರೆ ಮಾರ್ಗವಾಗಿ ಸಂಚರಿಸುತ್ತಿದ್ದ ಎಕ್ಸ್‌ಪ್ರೆಸ್‌ ಬಸ್‌ಗೆ ವಾಮಂಜೂರು ಸಮೀಪದ ಕೆತ್ತಿಕಲ್‌ನಲ್ಲಿ ಆಟೋ ರಿಕ್ಷಾ ಮುಖಾಮುಖಿಯಾಗಿ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಆಟೋ ರಿಕ್ಷಾ ಸಂಪೂರ್ಣವಾಗಿ ಜಖಂಗೊಂಡಿದೆ. ರಿಕ್ಷಾ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ರಿಕ್ಷಾದಲ್ಲಿದ್ದ ಇಬ್ಬರು ಪ್ರಯಾಣಿಕರಿಗೂ  ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಸಮಯಕ್ಕೆ ಸರಿಯಾಗಿ ಬೇರೆ ಬಸ್‌ಗಳ ಮೂಲಕ ಕಳುಹಿಸಿಕೊಡಲಾಯಿತು.

ಪ್ರಸ್ತುತ ಕೆತ್ತಿಕಲ್‌ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವುದರಿಂದ ಏಕಮುಖ ಸಂಚಾರಕ್ಕೆ (ಒನ್‌ವೇ) ಅವಕಾಶ ನೀಡಲಾಗಿದೆ. ರಸ್ತೆಯ ಒಂದು ಭಾಗದಲ್ಲಿ ಹಾಗೂ ಗುಡ್ಡಕ್ಕೆ ಸೈಡ್‌ವಾಲ್‌(ತಡೆಗೋಡೆ) ಅಳವಡಿಸುವಕೆಲಸ ನಡೆಯುತ್ತಿರುವುದರಿಂದ ವಾಹನ ಸವಾರರು ಎಚ್ಚರಿಕೆಯಿಂದ ಚಲಿಸಬೇಕಿದೆ. ಆದರೆ, ವಾಹನಗಳ ಅತಿವೇಗ ಮತ್ತು ಅಜಾಗರೂಕತೆಯೇ ಈ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಸ್ಥಳೀಯರು ದೂರಿದ್ದಾರೆ.


ಎಚ್ಚರಿಕಾ ಫಲಕಕ್ಕೆ ಆಗ್ರಹ:
ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಮತ್ತು ಅಪಾಯಕಾರಿ ತಿರುವುಗಳಲ್ಲಿ ಸೂಕ್ತ ಎಚ್ಚರಿಕಾ ಫಲಕಗಳನ್ನು ಅಳವಡಿಸಬೇಕು ಹಾಗೂ ವಾಹನಗಳ ವೇಗಕ್ಕೆ ಕಡಿವಾಣ ಹಾಕಬೇಕು ಎಂದು ಸಾರ್ವಜನಿಕರು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

 

 

error: Content is protected !!